ನಕಾರಾತ್ಮಕತೆ ತುಂಬುವ ಆರ್‌ಎಸ್‌ಎಸ್‌ : ಖರ್ಗೆ

| N/A | Published : Oct 13 2025, 02:01 AM IST

ಸಾರಾಂಶ

ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಸಂಘಟನೆಯು ಶಾಖೆ, ಸಾಂಘಿಕ್‌ ಅಥವಾ ಬೈಠಕ್‌ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

 ಬೆಂಗಳೂರು :  ನಾಡಿನ ಮಕ್ಕಳು ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಸಂಘಟನೆಯು ಶಾಖೆ, ಸಾಂಘಿಕ್‌ ಅಥವಾ ಬೈಠಕ್‌ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಚಿವರ ಪತ್ರದಲ್ಲೇನಿದೆ?:

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ, ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಐಕ್ಯತೆ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುವ ಕೆಲಸ ಮಾಡಲಾಗುತ್ತಿದೆ. ಪೊಲೀಸ್‌ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.

ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜನಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುದಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನ ನಮಗೆ ಅಧಿಕಾರ ನೀಡುತ್ತದೆ. ಹಾಗಾಗಿ ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಸಂಘಟನೆಯು ಶಾಖೆ, ಸಾಂಘಿಕ್‌ ಅಥವಾ ಬೈಠಕ್‌ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ನವರು ಭಾರತದ ತಾಲಿಬಾನಿಗಳು: ಹರಿಪ್ರಸಾದ್‌ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್‌) ಭಾರತದ ತಾಲಿಬಾನಿ ಸಂಘಟನೆ ಎಂದು ಹಿರಿಯ ಕಾಂಗ್ರೆಸ್ಸಿಗ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಟೀಕಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಆರೆಸ್ಸೆಸ್‌ ಸರ್ಕಾರದಲ್ಲಿ ನೋಂದಾಯಿಸದ ಸಂಘಟನೆ. ನೋಂದಾಯಿಸಿದ್ದರೆ ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ಆದರೆ, ನೋಂದಣಿ ಇಲ್ಲದೆ, ಅನುಮತಿ ಪಡೆಯದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ. ನಮ್ಮ ಪೊಲೀಸರು ಇದಕ್ಕೆ ಹೇಗೆ ಅವಕಾಶ ನೀಡುತ್ತಾರೆ ಎಂಬುದೂ ಪ್ರಶ್ನಾರ್ಹ ಎಂದರು.ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಹೋದ ಆರ್‌ಎಸ್‌ಎಸ್ ಸದಸ್ಯರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅವರನ್ನು ಬಂಧಿಸಿ ಕೇಸ್‌ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿಯ ಕ್ರಮ ಕರ್ನಾಟಕದಲ್ಲಿಯೂ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Read more Articles on