ವಿಧಾನಸೌಧದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೇಲೆ ಕ್ರಮ ಕೈಗೊಳ್ಳುವುದು ಅಂತಿಮವಾಗಿ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

 ಬೆಳಗಾವಿ : ವಿಧಾನಸೌಧದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೇಲೆ ಕ್ರಮ ಕೈಗೊಳ್ಳುವುದು ಅಂತಿಮವಾಗಿ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಡಿ.ಕೆ.ಶಿವಕುಮಾರ್‌ ಅವರ ವೈಯಕ್ತಿಕ ವಿಚಾರ. ಈ ಕುರಿತು ಅವರೇ ಸ್ಪಷ್ಟನೆ ನೀಡಬೇಕು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಧಾನಸಭೆಯಲ್ಲಿ ಆರೆಸ್ಸೆಸ್‌ ಗೀತೆ ಹಾಡಿರುವುದನ್ನು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ತೀವ್ರವಾಗಿ ಆಕ್ಷೇಪಿಸಿದ್ದರು. ನಾನು ಕೂಡ ಅವರ ವೈಯಕ್ತಿಕ ಹೇಳಿಕೆ ಅಂತಾ ಬಿಂಬಿಸಿದ್ದೆ. ಈ ಕುರಿತು ಡಿ.ಕೆ.ಶಿವಕುಮಾರ್‌ ಅವರು ಈಗಾಗಲೇ ಕ್ಷೇಮೆ ಕೇಳಿದ್ದು ಈ ವಿಷಯ ಇಲ್ಲಿಯೇ ಮುಕ್ತಾಯವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಎಷ್ಟೇ ಮಹತ್ವದ ಕೆಲಸಗಳನ್ನು ಮಾಡಿದರೂ ಬಿಜೆಪಿಯವರು ವಿರೋಧಿಸುವುದು ಸ್ವಾಭಾವಿಕ. ಇನ್ನೂ ಎರಡೂವರೇ ವರ್ಷಗಳ ಕಾಲ ಆರೋಪ, ವಿರೋಧಿಸುವುದು ಬಿಟ್ಟರೆ ಬಿಜೆಪಿಯವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಹೋರಾಟಗಾರ್ತಿ. ಇವರು ನಾಡಹಬ್ಬ ದಸರಾ ಉದ್ಘಾಟನೆ ಮಾಡುತ್ತಿರುವುದು ಒಳ್ಳೆಯ ವಿಚಾರ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದರಲ್ಲಿ ರಾಜಕಾರಣ ಅಥವಾ ಧರ್ಮ ಬೆರೆಸುವುದು ಸರಿಯಲ್ಲ ಎಂದು ಹೇಳಿದರು.

ಹೈಕೋರ್ಟ್‌ ಆದೇಶದ ಮೇರೆಗೆ ಧರ್ಮಸ್ಥಳ ಪ್ರಕರಣದ ಕುರಿತು ತನಿಖೆಗೆ ಎಸ್ಐಟಿ ರಚಿಸಲಾಗಿದೆ. ಈ ಪ್ರಕರಣ ತನಿಖೆ ಹಂತದಲ್ಲಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷದ ಯಾವುದೇ ಪಾತ್ರವೇನೂ ಇಲ್ಲ ಎಂದರು.