ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ

| Published : Jun 16 2024, 01:46 AM IST

ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.

ಕನ್ನಡಪ್ರಭ ವಾರ್ತೆ ಉಡುಪಿ

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಶ್ರೀ ಭಂಡಾರಕೇರಿ ಮಠಾಧೀಶರ ದಿವ್ಯಾನುಗ್ರಗದೊಂದಿಗೆ ನಡೆಯುತ್ತಿದ್ದ ಸರಣಿ ಪ್ರವಚನ ಮಾಲಿಕೆಯಲ್ಲಿ ಶ್ರೀರಾಮ ನಿರ್ಯಾಣ ವಿಷಯದಲ್ಲಿ ಪ್ರವಚನಗೈದ ಬಳಿಕ ಅಲ್ಲೇ ಕುಸಿದು ಅಸ್ವಸ್ಥಗೊಂಡಿದ್ದ ದ್ವೈತ ಸಿದ್ಧಾಂತ ಮೇರು ವಿದ್ವಾಂಸ, ಪ್ರಚನಕಾರ, ಶ್ರೀ ಕೃಷ್ಣ ಮಠ, ಅಷ್ಟಮಠಗಳ ಆಸ್ಥಾನ ವಿದ್ವಾಂಸರೂ ಆಗಿದ್ದ ವಿದ್ವಾನ್ ಸಗ್ರಿ ರಾಘವೇಂದ್ರ ಉಪಾಧ್ಯಾಯರು (72) ಶನಿವಾರ ಬೆಳಗ್ಗೆ ನಿಧನರಾದರು.

ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.

ಉಡುಪಿಯ ಪ್ರಸಿದ್ಧ ಶ್ರೀ ಮನ್ನಧ್ವ ಸಿದ್ಧಾಂತ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಅವಧಿ ದ್ವೈತ ವೇದಾಂತ ಶಾಸ್ತ್ರ ಪ್ರಾಧ್ಯಾಪಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದರು.

ಮಧ್ವಶಾಸ್ತ್ರದ ಬಗ್ಗೆ ಇದಮಿತ್ಥಂ ಎಂದು ಅಧಿಕೃತವಾಗಿ ಮಾತನಾಡಬಲ್ಲ ವಿದ್ವಾಂಸರಾಗಿದ್ದ ಅವರು ಶ್ರೀಕೃಷ್ಣ ಮಠ ಹಾಗೂ ಬಹುತೇಕ ಎಲ್ಲ ಮಾಧ್ವಮಠಗಳಿಂದ ವಿಶೇಷವಾಗಿ ಪುರಸ್ಕೃತರಾಗಿದ್ದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಶಿಷ್ಯರು ಅಭಿಮಾನಿಗಳನ್ನು ಅಗಲಿದ್ದಾರೆ.ಉಪಾಧ್ಯಾಯರ ನಿಧನಕ್ಕೆ ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಪಲಿಮಾರು ಮತ್ತು ಅದಮಾರು ಉಭಯ ಶ್ರೀಗಳು, ಪೇಜಾವರ, ಕಾಣಿಯೂರು, ಸೋದೆ, ಶೀರೂರು, ಮಂತ್ರಾಲಯ, ಭಂಡಾರಕೇರಿ, ಚಿತ್ರಾಪುರ ಶ್ರೀಗಳು, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ, ಯುವಬ್ರಾಹ್ಮಣ ಪರಿಷತ್, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ತುಳು ಶಿವಳ್ಳಿಬ್ರಾಹಣ ಮಹಾಮಂಡಲ, ಉಡುಪಿ ಪುರೋಹಿತರ ಸಂಘ, ಸಂಸ್ಕೃತ ಮಹಾವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ, ಮಾಜಿ ಶಾಸಕ ಕೆ.ರಘುಪತಿ ಭಟ್, ಶಾಸಕ ಯಶ್ಪಾಲ್ ಸುವರ್ಣ ಹೀಗೆ ಹಲವರು ತೀವ್ರ ಸಂತಾಪ ವ್ಯಕತಪಡಿಸಿದ್ದಾರೆ.