ಸಾರಾಂಶ
ಕ್ರಾಂತಿವೀರ ರಾಯಣ್ಣನ ಹುಟ್ಟೂರು ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲೂಕಿನ ನಂದಗಡದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕ್ರಾಂತಿವೀರ ರಾಯಣ್ಣನ ಹುಟ್ಟೂರು ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲೂಕಿನ ನಂದಗಡದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಯಣ್ಣನ ಹುಟ್ಟೂರು ಸಂಗೊಳ್ಳಿ ಹಾಗೂ ನೇಣುಗಂಬಕ್ಕೆ ಏರಿಸಿದ ನಂದಗಡ ಅಭಿವೃದ್ಧಿಗೆ 2016-17ನೇ ಸಾಲಿನಲ್ಲಿ ಪ್ರಾಧಿಕಾರ ರಚಿಸಲಾಗಿದೆ.
ರಾಯಣ್ಣನ ಹೆಸರು ಚಿರಸ್ಥಾಯಿಯಾಗಿಸಲು ಸಂಗೊಳ್ಳಿ ಮತ್ತು ನಂದಗಡ ಅಭಿವೃದ್ಧಿಗೆ ರಚಿಸಲಾದ ಪ್ರಾಧಿಕಾರಕ್ಕೆ ನೂರು ಎಕರೆ ಜಮೀನು ನೀಡಲಾಯಿತು ಎಂದರು.
ಅಪ್ಪಟ ದೇಶಭಕ್ತ ರಾಯಣ್ಣ ಯುವಕರಿಗೆ ಸ್ಫೂರ್ತಿಯಾಗಬೇಕು ಎಂಬ ಕಾರಣಕ್ಕೆ ₹267 ಕೋಟಿ ವೆಚ್ಚದಲ್ಲಿ ಸೈನಿಕ ಶಾಲೆ, ಶಿಲ್ಪವನ ನಿರ್ಮಿಸಲಾಗಿದೆ. ದೇಶಪ್ರೇಮ ಬೆಳೆಸಲು ಶಾಲೆ ಪ್ರೇರಣೆಯಾಗಿದೆ. ಸಂಗೊಳ್ಳಿ ರಾಯಣ್ಣನಲ್ಲಿದ್ದ ತಾಯ್ನಾಡಿನ ಪ್ರೇಮವನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹಲಗಲಿ ಬೇಡರು, ಟಿಪ್ಪು ಸುಲ್ತಾನ್ ಹೋರಾಟ ಸ್ಮರಣೀಯ: ಸುರಪುರದ ವೆಂಕಟಪ್ಪನಾಯಕ, ಹಲಗಲಿ ಬೇಡರು, ಟಿಪ್ಪು ಸುಲ್ತಾನ್, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹೀಗೆ ಅನೇಕ ಜನರು ಬ್ರಿಟೀಷರ ವಿರುದ್ಧ ಹೋರಾಡಿದವರು.
ಇವರ ದೇಶಪ್ರೇಮ ಸ್ಮರಣೀಯ. ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ಆದ್ದರಿಂದ ಇಂತಹ ಮಹನೀಯರ ಹೋರಾಟದ ಬದುಕು, ಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಸಂಗೊಳ್ಳಿ ರಾಯಣ್ಣನವರ ಹೆಸರು ದೇಶಾದ್ಯಂತ ಪ್ರಸಿದ್ಧಿಗೊಳಿಸಲು ಅನುಕೂಲವಾಗುವಂತೆ ಸೈನಿಕ ಶಾಲೆಯನ್ನು ಆರಂಭಿಸಲಾಗಿದೆ. ಈ ಶಾಲೆ ಇಡೀ ದೇಶಕ್ಕೆ ಮಾದರಿಯಾಗಬೇಕು.
ಸ್ಥಳೀಯ ಮಕ್ಕಳಿಗೆ ಪ್ರವೇಶ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯಾದ್ಯಂತ ಸೈನಿಕ ಶಾಲೆಯ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಶಾಲೆಗಳನ್ನು ಸ್ಥಾಪಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಕರ್ನಾಟಕ ಸರ್ಕಾರವು ಭೂಮಿ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಿರುವುದರಿಂದ ಶೇ.65 ಮತ್ತು ಶೇ.35ರ ಅನುಪಾತದಲ್ಲಿ ಪ್ರವೇಶ ಕಲ್ಪಿಸಬೇಕು. ಇಂತಹ ಶಾಲೆಗಳನ್ನು ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಸ್ಥಾಪಿಸಬೇಕು ಎಂದು ಹೇಳಿದರು.
ನಗರಾಭಿವೃದ್ಧಿ ಇಲಾಖೆ ಸಚಿವ ಸುರೇಶ ಬಿ.ಎಸ್ ಮಾತನಾಡಿ, ₹257 ಕೋಟಿ ವೆಚ್ಚದಲ್ಲಿ ದೇಶದಲ್ಲಿ ಮಾದರಿ ಸೈನಿಕ ಶಾಲೆ ಸ್ಥಾಪಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ.
ಸವದತ್ತಿ ಯಲ್ಲಮ್ಮ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ, ಕಿತ್ತೂರು ರಾಣಿ ಚನ್ನಮ್ಮಳ ಜನ್ಮಸ್ಥಳ ಹೀಗೆ ಅನೇಕ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳಿರುವುದರಿಂದ ಈ ಕ್ಷೇತ್ರಗಳನ್ನು ಪ್ರವಾಸಿತಾಣಗಳನ್ನಾಗಿ ರೂಪಿಸುವ ಕೆಲಸ ನಡೆದಿದೆ.
ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸುವ ಮೂಲಕ ಮುಖ್ಯಮಂತ್ರಿಗಳು ಬಸವಾದಿ ಶರಣರು ಹಾಗೂ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರನ್ನು ಒಳಗೊಂಡ ಸಮ ಸಮಾಜ ನಿರ್ಮಿಸಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಈ ಭಾಗದ ಜನರ ಆಶಯದಂತೆ ಸುಸಜ್ಜಿತ ಸೈನಿಕ ಶಾಲೆ ಹಾಗೂ ಶಿಲ್ಪವನ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ.
ಅಪ್ಪಟ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ನೂರು ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ಶಾಲೆಯು ಇಡೀ ದೇಶಕ್ಕೆ ಮಾದರಿಯಾಗಿದೆ. 45 ವರ್ಷದ ಹಿಂದಿನ ಮಲಪ್ರಭಾ ಯೋಜನೆಯಡಿ ಬೈಲಹೊಂಗಲ್ ಮತಕ್ಷೇತ್ರದ 48 ಹಳ್ಳಿಗಳು ಮುಳುಗಡೆಯಾಗಿವೆ.
ಈ ಗ್ರಾಮಗಳ ಜನರ ಅನುಕೂಲಕ್ಕಾಗಿ ಆರಂಭಿಸಲಾಗಿರುವ ಏತ ನೀರಾವರಿ ಯೋಜನೆಗಳು ಸ್ಥಗಿತಗೊಂಡಿದ್ದು, ಆ ಯೋಜನೆಗಳ ಅನುಷ್ಠಾನಕ್ಕೆ ಮುಂಬರುವ ಆಯವ್ಯಯದಲ್ಲಿ ವಿಶೇಷ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.
ಸಂಗೊಳ್ಳಿ ಹಿರೇಮಠ ಗುರು ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಗುರುಲಿಂದ ಶಿವಾಚಾರ್ಯ ಸ್ವಾಮೀಜಿ , ಸಂಗೊಳ್ಳಿ ಗ್ರಾಮ ತೀರಾ ಹಿಂದುಳಿದಿದ್ದು, ಈ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಆಗ್ರಹಿಸಿದರು.
ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಇದೇ ವೇಳೆ ಲೋಕೋಪಯೋಗಿ ಇಲಾಖೆಯ ಕೆಲಸಕಾರ್ಯಗಳಿಗೆ ಅನುಕೂಲವಾಗುವಂತೆ ನೂತನ ಮುಖ್ಯ ಎಂಜಿನಿಯರ್ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಚೂವಲ್ ಮೂಲಕ ಉದ್ಘಾಟಿಸಿದರು.
ಸಂಗೊಳ್ಳಿ ರಾಯಣ್ಣ ಕ್ಷೇತ್ರಾಧ್ಯಯನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಸಂಸದೆ ಮಂಗಲ ಅಂಗಡಿ, ಬೈಲಹೊಂಗಲ ಶಾಸಕ ಆಸಿಫ್ ಸೇಠ್, ಗಣೇಶ್ ಹುಕ್ಕೇರಿ, ಬಾಬಾಸಾಹೇಬ್ ಪಾಟೀಲ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ್ ವೈದ್ಯ, ಎಚ್.ವೈ.ಮೇಟಿ, ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಸಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಚಚಡಿ ಮೊದಲಾದವರು ಇದ್ದರು.