ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಸೋಮವಾರ ಪಕ್ಷದ ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ಧಾರವಾಡ:

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಸೋಮವಾರ ಪಕ್ಷದ ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು. ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಯಾಗಿ ಸಂಕನೂರ ಅವರು ನಾಮಪತ್ರ ಸಲ್ಲಿಸಿದ್ದು ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸಿ ಹ್ಯಾಟ್ರಿಕ್‌ ಸಾಧನೆ ಮಾಡಲಿದ್ದಾರೆ. ಇನ್ನು, ವಿದ್ಯಾರ್ಥಿಗಳ ಮುಖಂಡರಾಗಿ ಕಾಂತಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ನಮ್ಮ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗುವುದಿಲ್ಲ ಎಂದರು.

ಅಭ್ಯರ್ಥಿ ಎಸ್‌.ವಿ. ಸಂಕನೂರ ಮಾತನಾಡಿ, 12 ವರ್ಷಗಳಿಂದ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ರಾಜ್ಯದಲ್ಲಿದ್ದ ನಿರುದ್ಯೋಗಿ ಸಮಸ್ಯೆ ಬಗೆಹರಿಸಲು ಸದನದಲ್ಲಿ ಹಲವು ಬಾರಿ ಮುಖ್ಯಮಂತ್ರಿಗೆ ಪ್ರಶ್ನೆ ಕೇಳುವ ಮೂಲಕ ಗಮನ ಸೆಳೆದಿದ್ದೇನೆ. ರಾಜ್ಯ ಸರ್ಕಾರಿ ಇಲಾಖೆ, ನಿಗಮ ಮಂಡಳಿ, ವಿವಿ ಸೇರಿದಂತೆ ಒಟ್ಟು ನಾಲ್ಕು ಲಕ್ಷ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ತುಂಬಲು ಹೋರಾಟ ಮಾಡಿದ್ದೇವೆ. ಸರ್ಕಾರಿ ನೌಕರರಿಗೆ ಹಳೇ ಪಿಂಚಣಿಗಾಗಿಯೂ ಹೋರಾಟ ಮಾಡಿದ್ದು, ಪದವೀಧರರ ಉದ್ಯೋಗಕ್ಕಾಗಿ ಉದ್ಯೋಗ ಮೇಳ ಸಹ ಮಾಡಲಾಗಿದೆ. ಹೀಗಾಗಿ ಈ ಬಾರಿಯೂ ನನ್ನನ್ನು ಪದವೀಧರರು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಪ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವರಾದ ಬಿ.ಸಿ. ಪಾಟೀಲ, ಸಿ.ಸಿ. ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ಅಮೃತ ದೇಸಾಯಿ, ಮಾಜಿ ಮೇಯರ್‌ ಈರೇಶ ಅಂಚಟಗೇರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರಿದ್ದರು.