ಅರಸೀಕೆರೆ: ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಜಾಪ್ರಭುತ್ವದ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದ್ದು, ಅದರ ಯಶಸ್ಸಿಗೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ಕರೆ ನೀಡಿದರು.ನಗರದ ಶ್ರೀನಗರ ಬಡಾವಣೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಎರಡು ದಶಕಗಳ ಬಳಿಕ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಹೇಳಿದರು.ಮತದಾರರ ಪಟ್ಟಿಯಲ್ಲಿ ಇರುವ ನಕಲಿ, ಅನರ್ಹ ಹಾಗೂ ದ್ವಿಪಾತ್ರ ದಾಖಲೆಗಳನ್ನು ಪತ್ತೆಹಚ್ಚಿ ನೈಜ ಮತದಾರರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈ ಯೋಜನೆ ಯಶಸ್ವಿಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಅನರ್ಹ ಮತದಾರರನ್ನು ಪತ್ತೆಹಚ್ಚಿರುವುದು ಅದರ ಪರಿಣಾಮಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಪಕ್ಷ ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ. ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರು ಹೊಂದಿರುವವರಿಗೆ ಒಂದು ಹೆಸರು ಮಾತ್ರ ಉಳಿಸಿಕೊಳ್ಳುವ ಅವಕಾಶವಿದ್ದು, ಹೊಸ ಸೇರ್ಪಡೆ, ತಿದ್ದುಪಡಿ ಹಾಗೂ ರದ್ದುಪಡಿಸುವ ಪ್ರಕ್ರಿಯೆಗಳು ಎಸ್‌ಐಆರ್ ಮೂಲಕ ಪಾರದರ್ಶಕವಾಗಿ ನಡೆಯಲಿವೆ ಎಂದು ವಿವರಿಸಿದರು.ಜೆಡಿಎಸ್ ವಕ್ತಾರ ಹಾಗೂ ಎಸ್‌ಐಆರ್ ಉಸ್ತುವಾರಿ ವಕೀಲ ಪ್ರದೀಪ್ ಕುಮಾರ್ ಮಾತನಾಡಿ, ಮತದಾನ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು. ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಯಶಸ್ವಿಯಾಗಿ ಜಾರಿಯಾಗಿದ್ದು, ರಾಜ್ಯದಲ್ಲಿಯೂ ಇದರ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.ಮತ್ತೋರ್ವ ವಕ್ತಾರ ಮೋಹನ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಎನ್‌ಡಿಎ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸುತ್ತಿದ್ದು, 2028ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.ಸಭೆಯಲ್ಲಿ ತಾಪಂ ಮಾಜಿ ಸದಸ್ಯ ಭೋಜಾನಾಯ್ಕ್ ಸೇರಿದಂತೆ ಗಂಡಸಿ, ಬಾಣಾವರ, ಕಣಕಟ್ಟೆ, ಕಸಬಾ ಹಾಗೂ ನಗರದ ವಿವಿಧ ವಾರ್ಡ್‌ಗಳ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
ಎಸ್‌ಐಆರ್ ಪ್ರಕ್ರಿಯೆಗೆ ಎಲ್ಲರೂ ಕೈಜೋಡಿಸಿ ಎಂದ ಸಂತೋಷ್
ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಜಾಪ್ರಭುತ್ವದ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದ್ದು, ಅದರ ಯಶಸ್ಸಿಗೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ಕರೆ ನೀಡಿದರು. ಮತದಾರರ ಪಟ್ಟಿಯಲ್ಲಿ ಇರುವ ನಕಲಿ, ಅನರ್ಹ ಹಾಗೂ ದ್ವಿಪಾತ್ರ ದಾಖಲೆಗಳನ್ನು ಪತ್ತೆಹಚ್ಚಿ ನೈಜ ಮತದಾರರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈ ಯೋಜನೆ ಯಶಸ್ವಿಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಅನರ್ಹ ಮತದಾರರನ್ನು ಪತ್ತೆಹಚ್ಚಿರುವುದು ಅದರ ಪರಿಣಾಮಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.