ಸಾರಾಂಶ
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಸಾಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಸಾಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿ ತರಗತಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದಿಗೂ ಕೀಳರಿಮೆ ಇರಬಾರದು. ಪ್ರತಿಭೆ ಹಳ್ಳಿಗಳಲ್ಲಿಯೇ ಹೆಚ್ಚು. ಸಮಾಜದ ಸವಾಲುಗಳನ್ನು ನಿಭಾಯಿಸಬಲ್ಲ ಶಕ್ತಿಯು ಇಂತಹ ವಿದ್ಯಾರ್ಥಿಗಳಲ್ಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುವ ಹೆತ್ತವರ ನಂಬಿಕೆಗೆ ತಕ್ಕ ಉತ್ತರ ನೀಡುವ ಕರ್ಮವೀರ್ ವಿದ್ಯಾರ್ಥಿಗಳಾಗಬೇಕು ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೆಲ್ಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮೊಕ್ತೇಸರ ಸುನಿಲ್ ಕೆ.ಆರ್. ಅವರು, ರಾಷ್ಟ್ರೀಯತೆ ಹಾಗೂ ಸಂಸ್ಕಾರ ಬೆಳೆಸುವ ಶಿಕ್ಷಣಕ್ಕೆ ಇಂದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ್ ಶೆಟ್ಟಿ ವಹಿಸಿದ್ದರು. ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ನ್ಯಾಯವಾದಿ ನಂದಿನಿ ಶೆಟ್ಟಿ, ಟ್ರಸ್ಟ್ ಅಧ್ಯಕ್ಷ ಅವಿನಾಶ್ ಎ. ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ನಿವೃತ್ತ ಮುಖ್ಯ ಶಿಕ್ಷಕ ವಸಂತ್ ಎಂ. ಪ್ರಾಸ್ತಾವಿಕ ಭಾಷಣ ಮಾಡಿದರು. ಉಪನ್ಯಾಸಕ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು. ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥನೆ ಪ್ರಸ್ತುತಪಡಿಸಿದರು.