ಸಂಯೋಜನೆ ಹೆಸರಿನಲ್ಲಿ ರಾಜ್ಯದ 6 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬಳ್ಳಾರಿ

ಸಂಯೋಜನೆ ಹೆಸರಿನಲ್ಲಿ ರಾಜ್ಯದ 6 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದು ನಗರದ ರೈಲ್ವೆ ನಿಲ್ದಾಣದ ಬಳಿ ವಿದ್ಯಾರ್ಥಿ ಮುಖಂಡರು ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು. ನೂರೂರಾರು ಜನರು ಸಹಿಸಂಗ್ರಹಿಸುವ ಮೂಲಕ ವಿದ್ಯಾರ್ಥಿ ಸಂಘಟನೆಯ ಕಾಳಜಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಘಟನೆ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ರಾಜ್ಯದಲ್ಲಿ ಒಟ್ಟು 46,755 ಸರ್ಕಾರಿ ಶಾಲೆಗಳಿವೆ. ಅದರಲ್ಲಿ 21,255 ಶಾಲೆಗಳ ಕಟ್ಟಡಗಳು ಶಿಥಿಲಗೊಂಡು ಅಪಾಯದಲ್ಲಿವೆ. ಈ ಪೈಕಿ 171 ಶಾಲೆಗಳು ಬಳ್ಳಾರಿ ಜಿಲ್ಲೆಯಲ್ಲಿವೆ. ಹಲವು ವರ್ಷಗಳಿಂದ ದುರಸ್ತಿ ಕಾಣದ ಶಾಲೆಗಳ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿರುವುದು, ಪ್ರಾಣ ಕಳೆದುಕೊಂಡಿರುವ ಘಟನೆಗಳು ಸಂಭವಿಸಿವೆ. ಇಷ್ಟಾಗಿಯೂ ರಾಜ್ಯ ಸರ್ಕಾರ ಶಾಲೆಗಳತ್ತ ಗಮನ ಹರಿಸುತ್ತಿಲ್ಲ. ಈ ಶಾಲೆಗಳಿಗೆ ಶಿಕ್ಷಣದ ಕನಸು ಹೊತ್ತು ಬರುವವರು ಬಹುತೇಕ ಬಡವರು, ರೈತ -ಕಾರ್ಮಿಕರ ಮಕ್ಕಳಾಗಿದ್ದು, ಸರ್ಕಾರ ಕಟ್ಟಡ ದುರಸ್ತಿಗೊಳಿಸದೆ, ಶಿಕ್ಷಕರನ್ನು ನೇಮಿಸದೆ, ದಾಖಲಾತಿ ಕಡಿಮೆಯಾಗಿದೆ ಎಂಬ ನೆಪವೊಡ್ಡಿ ರಾಜ್ಯದ 6 ಸಾವಿರ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಇದೇ ತಿಂಗಳು 29ರಂದು ಜಿಲ್ಲೆಯ ಶಾಲೆಗಳು ಪುನಾರಂಭಗೊಳ್ಳಲಿವೆ. ಈ ಬಾರಿ ಹೆಚ್ಚು ಮಳೆ ಆಗಿರುವುದರಿಂದ ಶಾಲೆಗಳು ಮತ್ತಷ್ಟೂ ದುಃಸ್ಥಿತಿಯಲ್ಲೀವೆ. ಹೀಗಾಗಿ ಕೂಡಲೇ ಜಿಲ್ಲಾಡಳಿತ ಶಿಥಿಲಗೊಂಡಿರುವ ಶಾಲೆಗಳತ್ತ ಗಮನ ನೀಡಬೇಕು. ಶಾಲೆ ಶುರು ಮುನ್ನವೇ ದುರಸ್ತಿಗೊಳಿಸಬೇಕು. ಅಗತ್ಯ ಶಿಕ್ಷಕರ ನೇಮಕ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಉಪಾಧ್ಯಕ್ಷೆ ಎಂ.ಶಾಂತಿ, ಉಮಾ, ನಿಹಾರಿಕ ಉಪಸ್ಥಿತರಿದ್ದರು. ಸಾರ್ವಜನಿಕರು ಸಹಿ ಮಾಡಿ, ವಿದ್ಯಾರ್ಥಿ ಸಂಘಟನೆಗೊಂಡಿರುವ ಸರ್ಕಾರಿ ಶಾಲೆ ಉಳಿಸಿ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.