ನ್ಯಾಯಾಲಯದಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಬೇಕು.

ಧಾರವಾಡ:

ನ್ಯಾಯಾಲಯದಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಬೇಕು. ಫೋಕ್ಸೊ ಪ್ರಕರಣ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ ಹಾಗೂ ಎರಡನೇ ತ್ರೈಮಾಸಿಕ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ದೌರ್ಜನ್ಯ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಕೂಡಲೇ ಪರಿಹರಿಸಬೇಕು. ಅಲ್ಲದೇ ದಾಖಲಾದ ಪ್ರಕರಣಗಳಿಗೆ ಪರಿಹಾರದ ಮೊತ್ತ ಮಂಜೂರು ಮಾಡಿ, ವಿತರಿಸಬೇಕು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್, ಆರೋಗ್ಯ ತಪಾಸಣೆ, ಸುರಕ್ಷತಾ ಪರಿಕರ, ಗುಣಮಟ್ಟದ ಉಪಾಹಾರ, ಗೃಹಭಾಗ್ಯ ಯೋಜನೆಯಡಿ ಮನೆ, ವಿಶ್ರಾಂತಿ ಗೃಹ, ಅನುಕಂಪದ ಆಧಾರದ ಉದ್ಯೋಗ, ಆರ್ಥಿಕ ಸೌಲಭ್ಯ ಹಾಗೂ ಜೀವವಿಮೆ ಸೌಲಭ್ಯ ನೀಡಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿದರು. ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಡಿಸಿಪಿ ರವೀಶ್ ಸಿ.ಆರ್. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಇದ್ದರು.