ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ ಕಡ್ಡಾಯ: ಜಿಲ್ಲಾಧಿಕಾರಿ

| Published : Jul 04 2025, 11:48 PM IST / Updated: Jul 04 2025, 11:49 PM IST

ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ ಕಡ್ಡಾಯ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಇದುವರೆಗೆ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಸಂಬಂಧಿಸಿದಂತೆ 403 ದೌರ್ಜನ್ಯ ಮತ್ತು 20 ಪೋಕ್ಸೋ ಪ್ರಕರಣಗಳು ಬಾಕಿಯಿದೆ.

ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ । 403 ದೌರ್ಜನ್ಯ ಮತ್ತು 20 ಪೋಕ್ಸೋ ಪ್ರಕರಣ ಬಾಕಿಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ 2025ನೇ ವರ್ಷದ 2ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಈ ಸಭೆಗಳನ್ನು ನಿರಂತರವಾಗಿ ನಡೆಸುವುದು ಕಡ್ಡಾಯವಾಗಿದ್ದು, ಸಮಸ್ಯೆಗಳನ್ನು ತಹಸೀಲ್ದಾರ್‌ಗಳ ಹಂತದಲ್ಲಿಯೇ ಬಗೆಹರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಸಂಬಂಧಿಸಿದಂತೆ 403 ದೌರ್ಜನ್ಯ ಮತ್ತು 20 ಪೋಕ್ಸೋ ಪ್ರಕರಣಗಳು ಬಾಕಿಯಿದ್ದು, ಇವುಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೋಕ್ಸೋ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಈಗಾಗಲೇ 339 ಗ್ರಾಮ ಪಂಚಾಯಿತಿಗಳಲ್ಲಿ 210 ಪಂಚಾಯಿತಿಗಳಲ್ಲಿ ಸಭೆ ನಡೆದಿದ್ದು, ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ಸಭೆಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಅಕ್ಕಿ ಗಿರಣಿ ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆಗಾಗಿ ಅಗತ್ಯವಾದ ಸಾಧನಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಕ್ಕಿ ಗಿರಣಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಸಭೆಗೆ ಗೈರಾದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರಲ್ಲದೆ, ಮುಂದಿನ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.

ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಜಗಜೀವನರಾಂ ಅವರ ಭವನ ಮತ್ತು ಉದ್ಯಾನವನ ನಿರ್ಮಿಸಲು ಪ್ರತಿ ತಾಲೂಕಿನಲ್ಲಿ 10 ಗುಂಟೆ ಸ್ಥಳವನ್ನು ಕಲ್ಪಿಸಿಕೊಡಬೇಕೆಂದು ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ನಿರ್ಲಕ್ಷ ತೋರದೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್ ಮಾತನಾಡಿ, ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಹಂತದಲ್ಲಿ ಪ್ರತಿ ತಿಂಗಳು ಪೋಕ್ಸೋ ಹಾಗೂ ಡ್ರಗ್ಸ್ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜೀತ ಪದ್ಧತಿ ಸೇರಿದಂತೆ ಇತರ ಎಲ್ಲಾ ಪ್ರಕರಣಗಳಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಪ್ರತಿ ತಿಂಗಳು ಜಿಲ್ಲೆಯಲ್ಲಿನ ಎಲ್ಲ ಪೊಲೀಸ್ ಠಾಣೆಗಳಲ್ಲಿ ಎಸ್‌ಸಿ,ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆಗಳನ್ನು ನಡೆಸುತ್ತಿದ್ದು, ದಾಖಲಾಗಿರುವ ಎಲ್ಲ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಜ. 1ರಿಂದ ಮಾರ್ಚ್ 27 ರ ಅಂತ್ಯದವರೆಗೂ ಪರಿಶಿಷ್ಟ ಜಾತಿಯ 51 ದೌರ್ಜನ್ಯ ಪ್ರಕರಣಗಳಲ್ಲಿ 79 ಸಂತ್ರಸ್ತರಿಗೆ 43,75,000 ರು. ಹಾಗೂ ಪರಿಶಿಷ್ಟ ಪಂಗಡದ 19 ಪ್ರಕರಣಗಳಲ್ಲಿ 20 ಸಂತ್ರಸ್ತರಿಗೆ 12,50,000 ರು. ಪರಿಹಾರ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ವಿವಿಧ ತಾಲೂಕು ತಹಸೀಲ್ದಾರರು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.