ಇಂದಿನಿಂದ ಪರಿಶಿಷ್ಟ ಜಾತಿ ದತ್ತಾಂಶ ಸಂಗ್ರಹ ಸಮೀಕ್ಷೆ

| Published : May 05 2025, 12:46 AM IST

ಸಾರಾಂಶ

ಮೇ 19ರಿಂದ 21 ರವರೆಗೆ ಕುಟುಂಬಗಳ ಮಾಹಿತಿ ಸಂಗ್ರಹಕ್ಕಾಗಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಮತ್ತು ಕಾರ್ಕಳ, ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗಿಕರಣ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸಿನಂತೆ ಪ.ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸರ್ಕಾರ ಆದೇಶಿಸಿದ್ದು, ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಶಾಲಾ ಶಿಕ್ಷಕರಿಂದ ಮನೆ ಮನೆ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಮೇ 19ರಿಂದ 21 ರವರೆಗೆ ಕುಟುಂಬಗಳ ಮಾಹಿತಿ ಸಂಗ್ರಹಕ್ಕಾಗಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಮತ್ತು ಕಾರ್ಕಳ, ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ ಎಂದರು.

ಸಮೀಕ್ಷೆ ಕಾರ್ಯ ಕೈಗೊಳ್ಳಲು 1112 ಬೂತ್‌ಗಳಲ್ಲಿ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗಿದೆ. ಮೇಲ್ವಿಚಾರಣೆಗೆ 112 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಆಧಾರ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಟುಂಬದ ಸದಸ್ಯರಲ್ಲಿ ಆಧಾರ್ ಇಲ್ಲದಿದ್ದರೆ ಕೂಡಲೇ ನೋಂದಣಿ ಮಾಡಿಕೊಳ್ಳಬೇಕು. ಇದರೊಂದಿಗೆ ರೇಶನ್ ಕಾರ್ಡ್‌ ಕೂಡ ನೀಡಬೇಕು ಎಂದರು.ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.