ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕರ್ನಾಟಕ ರಾಜ್ಯ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ನ.15ರಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಸೂಚಿಸಿದರು.ಜಿಲ್ಲಾ ಪಂಚಾಯಿತಿ ಹಳೆಯ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳಲ್ಲಿನ ಕಳೆದ ಮೂರು ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಗಳಡಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ಯೋಜನೆಗಳ ಕುರಿತು ಪ್ರಶ್ನಾವಳಿಗಳ ರೀತಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ನಿಖರವಾದ ಮಾಹಿತಿಯನ್ನು ಮತಕ್ಷೇತ್ರವಾರು ರೀತಿಯಲ್ಲಿ ತಯಾರಿ ಹೊಂದಿರಬೇಕು ಎಂದು ಹೇಳಿದರು.
ಪರಿಶಿಷ್ಟರ ಕಲ್ಯಾಣ ಸಮಿತಿ ಸಭೆಗೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಸಮಿತಿಯು ಕೇಳುವ ಎಲ್ಲ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಸಮಿತಿ ಸಭೆ ನಡೆಸಲು ಸೂಕ್ತ ವ್ಯವಸ್ಥೆ ಮಾಡುವುದರ ಜೊತೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಸ್ವಾಗತಿಸಲು ಅವಶ್ಯವಿರುವ ಎಲ್ಲಾ ರೀತಿಯ ಶಿಷ್ಟಾಚಾರ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಆಯಾ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ ಇರುವ ಸೌಲಭ್ಯಗಳು ಯಾವವು, ಅನುದಾನ ಬಂದಿದ್ದು ಎಷ್ಟು ಹಾಗೂ ಬಳಕೆಯಾದ ಮತ್ತು ಉಳಿದಿರುವ ಅನುದಾನ ಮತ್ತು ಅಂಕಿ ಅಂಶಗಳ ಬಗ್ಗೆ ಸರಿಯಾದ ಮಾಹಿತಿ ಇಟ್ಟುಕೊಂಡಿರಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ವಾತನಾಡಿ, ಸುಳ್ಳು ಜಾತಿ ಪ್ರಕರಣಗಳು, ದಲಿತ ಸಮುದಾಯದವರ ಮೇಲೆ ಹಲ್ಲೆ ಅಥವಾ ಬಹಿಷ್ಕಾರ ಮಾಡಿರುವ ಪ್ರಕರಣಗಳ ಕುರಿತು ಮಾಹಿತಿ ಕೇಳುವದರಿಂದ ಪೂರ್ವಸಿದ್ಧತೆ ಸರಿಯಾಗಿ ಮಾಡಿಕೊಳ್ಳಿ ಅನಗತ್ಯವಾದ ಗೊಂದಲ ಸೃಷ್ಟಿಸಿಕೊಳ್ಳದೆ ಸಭೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರುತ್ರೇನ ಪಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))