ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರುನಗರದ ಖಾಸಗಿ ಶಾಲೆಯ ವಿವಾದಕ್ಕೆ ಸಂಬಂಧಿಸಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಶ್ವಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹಾಗೂ ಇಬ್ಬರು ಕಾರ್ಪೊರೇಟರ್‌ಗಳ ಮೇಲೆ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ನಗರದ ಮಿನಿ ವಿಧಾನಸೌಧ ಮುಂಭಾಗ ವಿಶ್ವಹಿಂದು ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಿದರು. ಈ ವೇಳೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮೆರವಣಿಗೆಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದಾರೆ.ಕೇಸು ದಾಖಲಿಸಿದ್ದನ್ನು ವಿರೋಧಿಸಿ ವಿವಿಧ ಠಾಣೆಗಳ ಮುಂಭಾಗ ವಿಎಚ್‌ಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಆದರೆ ಅದಕ್ಕೆ ಅನುಮತಿ ಸಿಗದೆ ಇದ್ದುದರಿಂದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಆಯೋಜಿಸಿದ್ದರು.ಪ್ರತಿಭಟನೆಯ ಕೊನೆಯಲ್ಲಿ ಪೊಲೀಸ್ ಕಮಿಷನರ್ ಕಚೇರಿಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಮುಖಂಡರು ಆಗ್ರಹಿಸಿದರು. ಈ ವೇಳೆ ಮೆರವಣಿಗೆಯಲ್ಲಿ ತೆರಳಲು ಕಾರ್ಯಕರ್ತರು ಮುಂದಾಗಿದ್ದು, ಪೊಲೀಸರು ತಡೆಯೊಡ್ಡಿದರು. ಸಂಘಟನೆ ಕಾರ್ಯಕರ್ತರು ಬ್ಯಾರೀಕೇಡ್‌ಗಳನ್ನು ತಳ್ಳಿ ಮುನ್ನುಗ್ಗಿದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ಕೆಲವರು ರಸ್ತೆಯಲ್ಲೇ ಮಲಗಿ ಜೈಶ್ರೀರಾಮ್ ಘೋಷಣೆ ಕೂಗಿದರು. ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ಬಲವಂತವಾಗಿ ವಾಹನಗಳಿಗೆ ತಳ್ಳಿದರು. ನಾಲ್ಕೈದು ಪೊಲೀಸ್ ವಾಹನಗಳಲ್ಲಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದರು.ಇದಕ್ಕೂ ಮೊದಲು ಪ್ರತಿಭಟನೆಯಲ್ಲಿ ರಸ್ತೆಗಡ್ಡಲಾಗಿ ನಿಂತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕ್ಲಾಕ್ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದ ಕಡೆಗೆ ತೆರಳುವ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಕಾರ್ಯಕರ್ತರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಹಿಂದೂ ಮುಖಂಡರ ಕೇಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ದೇವರ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಶ್ವಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಮಾತನಾಡಿ, ಶ್ರೀರಾಮ ದೇವರು, ಪ್ರಧಾನಿ ಮೋದಿ ಅವರನ್ನು ಶಿಕ್ಷಕಿ ನಿಂದಿಸಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಆದರೆ, ಶಿಕ್ಷಕಿಯನ್ನು ವಜಾಗೊಳಿಸಬೇಕೆಂದು ಪ್ರತಿಭಟನೆ ಮಾಡಿದ ಶಾಸಕರು, ಮಹಾನಗರ ಪಾಲಿಕೆ ಸದಸ್ಯರು, ವಿಎಚ್‌ಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.ವಿಹಿಂಪ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ಉಪಾಧ್ಯಕ್ಷ ಮನೋಹರ ಸುವರ್ಣ, ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್, ಕಾರ್ಪೊರೇಟರ್‌ಗಳಾದ ದಿವಾಕರ ಪಾಂಡೇಶ್ವರ, ಸುಮಿತ್ರಾ ಕರಿಯ, ಶ್ವೇತಾ ಪೂಜಾರಿ, ಲೋಹಿತ್ ಅಮೀನ್, ಗಾಯತ್ರಿ ರಾವ್, ಶೈಲೇಶ್ ಶೆಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಖಂಡನೆ: ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲು ತೆರಳುತ್ತಿದ್ದ ವಿಹಿಂಪ, ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿರುವ ಜಿಲ್ಲಾಡಳಿತ, ಪೊಲೀಸರ ಕ್ರಮವನ್ನು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಖಂಡಿಸಿದ್ದಾರೆ. ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.