ಸಾರಾಂಶ
ಶಿಡ್ಲಘಟ್ಟದ ಕುದುಪಕುಂಟೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಪತ್ತೆಯಾಗಿದೆ. ಇದರಿಂದ ಪೋಷಕರ ಆಕ್ರೋಶ ವ್ಯಕ್ತವಾಗಿದ್ದು, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು ಆಗಿದ್ದಾರೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗಿಳಿಸಿ ಸ್ವಚ್ಛತಾ ಕಾರ್ಯಕ್ಕೆ ಬಳಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಸ್ವಚ್ಛತೆಗೆ ಮಕ್ಕಳನ್ನು ಬಳಸಿದ ಪ್ರಕರಣ ಬೆಳಕಿಗೆ ಬಂದಿದೆ.ಘಟನೆ ಬೆನ್ನಲ್ಲೇ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯದ ಸ್ವಚ್ಛತಾ ಕಾರ್ಯ ಮಾಡಿಸದಂತೆ ಸರ್ಕಾರದ ಸ್ಪಷ್ಟ ಆದೇಶವಿದೆ. ಇಷ್ಟಾದರೂ ಈ ಶಾಲೆಯಲ್ಲಿ ಹೆಣ್ಣುಮಕ್ಕಳಿಬ್ಬರ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವುದನ್ನು ಕಂಡು ಸಾರ್ವಜನಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಶಿಡ್ಲಘಟ್ಟ ತಾಪಂ ಇಒ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳಿಂದ ಗೌಪ್ಯ ಹೇಳಿಕೆಯನ್ನೂ ಪಡೆದಿದ್ದಾರೆ.ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಕಿಯ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಬಿಇಒ ನರೇಂದ್ರ ಕುಮಾರ್, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದೇವೆ. ಅದರಂತೆ ಪ್ರಭಾರ ಮುಖ್ಯ ಶಿಕ್ಷಕಿ ರೇಣುಕಾರನ್ನು ಅಮಾನತುಗೊಳಿಸಲಾಗಿದೆ. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬೈಲಾಂಜಿನಪ್ಪ ‘ಕನ್ನಡಪ್ರಭ’ದೊಂದಿಗೆ ಮಾತನಾಡಿ, ಘಟನೆ ಕುರಿತು ಪ್ರಾಥಮಿಕ ವರದಿ ತರಿಸಿಕೊಂಡಿದ್ದು, ಸೋಮವಾರ ರಾತ್ರಿ ಪ್ರಭಾರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದೇನೆ. ಕೂಲಂಕಶ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.