ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜತೆಗೆ ವಿಜ್ಞಾನದ ವಿವಿಧ ಪರಿಕಲ್ಪನೆಗಳನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ವಿಜ್ಞಾನ ಜಾತ್ರೆಗಳು ಮಹತ್ವದ ವೇದಿಕೆಯಾಗಿವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜತೆಗೆ ವಿಜ್ಞಾನದ ವಿವಿಧ ಪರಿಕಲ್ಪನೆಗಳನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ವಿಜ್ಞಾನ ಜಾತ್ರೆಗಳು ಮಹತ್ವದ ವೇದಿಕೆಯಾಗಿವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ತಿಕೋಟಾದ ಎ.ಬಿ.ಜತ್ತಿ ಶಾಲೆ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ (ಗ್ರಾಮೀಣ ವಲಯ), ಬಿ.ಎಲ್.ಡಿ.ಇ ಸಂಸ್ಥೆ ಹಾಗೂ ಅಗಸ್ತ್ಯ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ವಿಜ್ಞಾನಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಕ್ಕಳ ಶಿಕ್ಷಣದ ಬಗ್ಗೆ ಸಚಿವ ಎಂ.ಬಿ.ಪಾಟೀಲರು ಹೊಂದಿರುವ ಕಾಳಜಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ. ಇತರೆ ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಕ್ರಮ ಆಯೋಜಿಸಲು ಸಹಕಾರ ನೀಡಲಾಗುವುದು ಎಂದರು.ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ಅತ್ಯಂತ ದೊಡ್ಡ ಇಲಾಖೆಯಾಗಿದ್ದು, ಶೇ.38ರಷ್ಟು ಸಿಬ್ಬಂದಿ ಈ ಇಲಾಖೆಯಲ್ಲಿದ್ದಾರೆ. ಕಳೆದ ಮೂರೂವರೆ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳಿಗೆ ಶಾಲೆಯಲ್ಲಿ ಶಿಕ್ಷಣದ ಜತೆಗೆ ಪೌಷ್ಟಿಕ ಆಹಾರವೂ ದೊರೆಯಬೇಕು. ಈ ಉದ್ದೇಶದಿಂದ ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಎಲ್ಕೆಜಿಯಿಂದ ಪಿಯುಸಿವರೆಗೆ ಸುಮಾರು 14 ವರ್ಷಗಳ ಶಿಕ್ಷಣವನ್ನು ಒಂದೇ ಸೂರಿನಡಿ ಉಚಿತವಾಗಿ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯ, ಆಧುನಿಕ ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಆರನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಪರಿಚಯ ಮಾಡಿಕೊಡುವ ಚಿಂತನೆ ಇದೆ ಎಂದರು.ವಿಜ್ಞಾನ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಮಾದರಿಗಳ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಡಾ.ಎಂ.ಬಿ.ಪಾಟೀಲ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಈ ಭಾಗದ ಸರ್ಕಾರಿ ಶಾಲೆಗಳಲ್ಲಿ ಸುಮಾರು 93 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆಗಳ ಶೈಕ್ಷಣಿಕ ಪ್ರಗತಿ ಹಾಗೂ ಉತ್ತಮ ಫಲಿತಾಂಶಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲ ಶಾಲೆಗಳ ಮಕ್ಕಳಿಗೂ ಶಾಲಾ ಬ್ಯಾಗ್ ವಿತರಿಸುವ ಸಂಕಲ್ಪ ಹೊಂದಲಾಗಿದೆ ಎಂದು ತಿಳಿಸಿದರು.ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಡೀನ್ ಡಾ.ನರಸಿಂಹ ಆಯಚಿತ್ ಅವರು ವಿಜ್ಞಾನದ ಅಗತ್ಯ ಮತ್ತು ಅನಿವಾರ್ಯತೆ ಕುರಿತು ಮಾತನಾಡಿ, ಮಕ್ಕಳ ದಿನಾಚರಣೆಯಂದು ಮಕ್ಕಳು ಓದುವುದರ ಜತೆಗೆ ಕಲಿತ ವಿಷಯಗಳನ್ನು ತಿಳಿದುಕೊಳ್ಳಬೇಕು. ಅಲ್ಲದೆ, ಅವುಗಳನ್ನು ಪ್ರಾಯೋಗಿಕವಾಗಿ ಅನ್ವಯಿಸಿಕೊಳ್ಳಬೇಕು. ಎಲ್ಲ ವಿಷಯಗಳ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ವಿಜಯಪುರ ಗ್ರಾಮೀಣ ವಲಯದ ವಿವಿಧ ಕ್ಲಸ್ಟರ್ಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿಜ್ಞಾನ ಯೋಜನೆಗಳು ಜಾತ್ರೆಯಲ್ಲಿ ಪ್ರದರ್ಶನಗೊಂಡವು. ಸರ್ಕಾರಿ ಶಾಲೆಗಳ 5ರಿಂದ 10ನೇ ತರಗತಿಯ ಪಠ್ಯಕ್ರಮದಲ್ಲಿನ ಸುಮಾರು ಶೇ.60ರಷ್ಟು ವಿಜ್ಞಾನ ಪರಿಕಲ್ಪನೆಗಳನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ಅನುಕೂಲವಾಗುವಂತೆ ಮಾದರಿಗಳನ್ನು ರೂಪಿಸಲಾಗಿತ್ತು. ಕಡಿಮೆ ವೆಚ್ಚದ ರೋಬೋಟ್ಗಳು, ಸಂವೇದಕ ಆಧಾರಿತ ಮಾದರಿಗಳು, ವಿದ್ಯುತ್, ಕಾಂತತ್ವ, ಬೆಳಕಿನ ವಿಜ್ಞಾನ, ರಾಸಾಯನಿಕ ಕ್ರಿಯೆಗಳು, ದ್ಯುತಿ ಸಂಶ್ಲೇಷಣೆ, ಮಾನವನ ದೇಹದ ರಚನೆ ಹಾಗೂ ಪಂಚೇಂದ್ರಿಯಗಳಿಗೆ ಸಂಬಂಧಿಸಿದ ಮಾದರಿಗಳು ಪ್ರದರ್ಶನದಲ್ಲಿದ್ದವು. ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ, ಶಾಲಾ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಡಿಪಿಐ ಮಂಜುನಾಥ ಗುಳೇದಗುಡ್ಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಅಗಸ್ತ್ಯ ಫೌಂಡೇಶನ್ನ ಗೀತಾ ಪಾಟೀಲ, ಎ.ಬಿ.ಜತ್ತಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಜ್ಞಾನಾಸಕ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.