ಸಾರಾಂಶ
ಚಳ್ಳಕೆರೆ ನಗರದ ಎಚ್‌ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತುಪ್ರದರ್ಶನವನ್ನು ಬಿಇಒ ಕೆ.ಎಸ್.ಸುರೇಶ್ ವಿಜ್ಞಾನ ಮಾದರಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ ವಿಶ್ವಮಟ್ಟದಲ್ಲಿ ಪೈಪೋಟಿ ಎದುರಿಸಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಲು ನಮಗೆ ವಿಜ್ಞಾನ ಅವಶ್ಯಕ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.
ಬುಧವಾರ ನಗರದ ಎಚ್‌ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜ್ಞಾನ ಮಾದರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರೌಢಶಾಲಾ ಮಟ್ಟದಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಬೇಕೆಂದು, ವಿಜ್ಞಾನ ಜ್ಞಾನದಿಂದ ಮಾತ್ರ ಹೊಸ ಸಂಶೋಧನೆಗಳನ್ನು ಮಾಡಬಹುದು ಎಂದರು.ತಾಲೂಕಿನಾದ್ಯಂತ ಸುಮಾರು 60ಕ್ಕೂ ಹೆಚ್ಚು ಪ್ರೌಢಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಹೊಸ, ಹೊಸ ಮಾದರಿಗಳನ್ನು ಸಿದ್ಧಪಡಿಸಿ ತಾವು ಸಹ ವಿಜ್ಞಾನದಲ್ಲಿ ಸಬಲರು ಎಂಬುವುದನ್ನು ತೋರಿಸಿದ್ದಾರೆ. ವಿದ್ಯಾರ್ಥಿಗಳ ಕ್ರಿಯಾಶೀಲತೆ ಎಲ್ಲಾ ಹಂತದಲ್ಲೂ ನಾವು ಕಾಣಬಹುದು. ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಜ್ಞಾನದ ಮಟ್ಟ ಹೆಚ್ಚುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ವಿಜ್ಞಾನ ವಿಷಯವನ್ನು ಅರ್ಥೈಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಈರಣ್ಣ ಮಾತನಾಡಿ, ನಮ್ಮ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ನೀಡಿರುವುದು ಸಂತಸ ತಂದಿದೆ. ನಮ್ಮ ಶಾಲೆಯ ಹಲವಾರು ವಿದ್ಯಾರ್ಥಿನಿಯರು ಹೊಸ ಪ್ರಯೋಗವನ್ನು ಸಿದ್ಧಪಡಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಸಕ್ತಿಯಿಂದ ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿರುವುದು ಶೈಕ್ಷಣಿಕ ದೃಷ್ಠಿಯಿಂದ ಉತ್ತಮ ಬೆಳವಣಿಗೆಯಾಗಿದೆ ಎಂದರು.ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಶ್ರೀನಿವಾಸ್, ಕಾರ್ಯದರ್ಶಿ ಡಿ.ಎಸ್.ಪಾಲಯ್ಯ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜಕುಮಾರ್, ರುದ್ರಮುನಿ, ನಾಗರಾಜು ಮುಂತಾದವರು ಪಾಲ್ಗೊಂಡಿದ್ದರು.