ಪಾಂಡವಪುರ: ತಾಲೂಕಿನ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನದ ದಿನದ ಅಂಗವಾಗಿ ಶುಕ್ರವಾರ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.
ವಸ್ತು ಪ್ರದರ್ಶನದಲ್ಲಿ ಶಾಲೆಯ ಪ್ರೀಕೆಜಿ ಮಕ್ಕಳಿಂದ ಹಿಡಿದು 9ನೇ ತರಗತಿಯಿಂದ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ವಿಜ್ಞಾನ, ತಂತ್ರಜ್ಞಾನ, ಕೃಷಿ, ಮಾದರಿ ನಗರ, ವಿದ್ಯುತ್ ಉತ್ಪಾದನೆ, ಜಲಸಂರಕ್ಷಣೆ ಸೇರಿದಂತೆ ಹಲವು ಮಾದರಿಗಳನ್ನು ಪ್ರದರ್ಶಿಸಿದರು.ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಶಾಲೆಯಲ್ಲಿ ಮಕ್ಕಳು ತಯಾರಿಸಿಕೊಂಡು ಬಂದಿದ್ದ ವಿಜ್ಞಾನ ವಸ್ತು ಪ್ರದರ್ಶನದ ಮಾದರಿಗಳನ್ನು ವೀಕ್ಷಣೆ ಮಾಡಿ ಮಕ್ಕಳಿಂದ ಮಾಹಿತಿ ಪಡೆದ ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಶಾಲೆಗಳಲ್ಲಿ ಪ್ರತಿವರ್ಷವು ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಬಿಜಿಎಸ್ ಎಲ್ಲಾ ಶಾಲೆಗಳಲ್ಲೂ ಪ್ರತಿವರ್ಷ ವಿಜ್ಞಾನ ವಸ್ತು ಪ್ರದರ್ಶನ ಮಾಡಲಾಗುತ್ತಿದೆ. ಪೋಷಕರು ಹಾಗೂ ಶಿಕ್ಷಕರ ಸಹಕಾರದಿಂದ ಕಾರ್‍ಯಕ್ರಮ ಯಶಸ್ಸಿಯಾಗಿದೆ. ಇಂಥ ಕಾರ್‍ಯಕ್ರಮಗಳನ್ನು ನಡೆಸುವುದರಿಂದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದಂತಾಗುತ್ತದೆ. ಮುಂದಿನ ದಿನಗಳಲ್ಲಿ ಮಕ್ಕಳ ಜೀವನವು ವೈಜ್ಞಾನಿಕವಾದ ರೂಪುರೇಷಗಳನ್ನು ಪಡೆದು ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಳ್ಳಲೆಂದು ತಿಳಿಸಿದರು.ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳನ್ನು ಶಾಲಾ ಹಂತದಲ್ಲಿ ನಡೆಸುವುದರಿಂದ ಮಕ್ಕಳ ಮುಂದಿನ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಜತೆಗೆ ಮಕ್ಕಳಲ್ಲಿ ಧೈರ್ಯ, ಆತ್ಮಸ್ಥೈರ್ಯವು ಹೆಚ್ಚುತ್ತದೆ ಎಂದರು.
ಕಾರ್‍ಯಕ್ರಮದಲ್ಲಿ ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ, ಗ್ರಾಪಂ ಮಾಜಿ ಸದಸ್ಯ ಸಿ.ಡಿ.ಮಹದೇವು, ಪ್ರಗತಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಗಿಮುದ್ದನಹಳ್ಳಿ ನಾಗೇಶ್, ಮುಖಂಡ ಮಂಜುನಾಥ್, ಪ್ರಾಂಶುಪಾಲ ಚಿದಂಬರ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.