ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ತಂಡದ ಕಾರ್ಯನಿರ್ವಹಣೆ, ನಾಯಕತ್ವ ಗುಣಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಲು ಅತ್ಯಂತ ಸಹಕಾರಿಯಾಗುತ್ತವೆ.
ಧಾರವಾಡ:
ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ಸೇವಾ ಮನೋಭಾವ, ಸ್ವಾವಲಂಬನೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನಾಚರಣೆ ಅಂಗವಾಗಿ ಇಲ್ಲಿನ ಜೆಎಸ್ಸೆಸ್ ಕಾಲೇಜಿನಲ್ಲಿ ನೂತನವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳನ್ನು ಉದ್ಘಾಟಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, "ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ತಂಡದ ಕಾರ್ಯನಿರ್ವಹಣೆ, ನಾಯಕತ್ವ ಗುಣಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಲು ಅತ್ಯಂತ ಸಹಕಾರಿಯಾಗುತ್ತವೆ " ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷ ಎಂ.ಎಲ್. ಹಂಚಾಟೆ ಮಾತನಾಡಿ, "ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ; ಬದಲಾಗಿ 1907ರಲ್ಲಿ ಲಾರ್ಡ್ ರಾಬರ್ಟ್ ಬೇಡನ್-ಪೊವೆಲ್ ಅವರಿಂದ ಪ್ರಾರಂಭಿಸಲ್ಪಟ್ಟ ಒಂದು ಜಾಗತಿಕ ಯುವ ಚಳವಳಿಯಾಗಿದೆ. ಈ ಘಟಕಗಳ ಮೂಲಕ ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆ, ಶಿಬಿರ ಜೀವನ, ಪರಿಸರ ಸಂರಕ್ಷಣೆ, ತಂಡದ ಕೆಲಸ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕ ಸೇವೆಯಂತಹ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ " ಎಂದರು.ಕಾಲೇಜಿನ ಪ್ರಾಚಾರ್ಯ ಪ್ರೊ. ವೆಂಕಟೇಶ ಮುತಾಲಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಸಂಯೋಜಕ ಶಿವಾನಂದ ನರಹಟ್ಟಿ, ಡಾ. ಸೂರಜ್ ಜೈನ್, ಡಾ. ನಳಿನಿ ಕುಲಕರ್ಣಿ, ಆವಂತಿಕ ರೊಟ್ಟಿ ಹಾಗೂ ಮಹಾವೀರ ಉಪಾಧ್ಯೆ ಉಪಸ್ಥಿತರಿದ್ದರು.