ಸಾರಾಂಶ
ಕೊಪ್ಪಳ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಸ್ಥೆಯ ಜಿಲ್ಲಾ ಕೌನ್ಸಿಲ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ ಕಲಿಸುತ್ತದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಕಡ್ಡಾಯವಾಗಿ ಇರಬೇಕು. ಘಟಕಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರಮುಖ ಸಂದರ್ಭಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು ಸ್ವಯಂ ಪ್ರೇರಿತವಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲಾ ಸಂಸ್ಥೆಯಿಂದ ಎಲ್ಲ ಶಾಲೆಗಳಲ್ಲೂ ಆಸಕ್ತ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ, ಸಮವಸ್ತ್ರ ಒದಗಿಸಿ, ಔಪಚಾರಿಕ ಶಿಕ್ಷಣದೊಂದಿಗೆ ಬದುಕಿನ ಶಿಸ್ತು ಕಲಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಪ್ರಧಾನ ಆಯುಕ್ತ ಎಚ್.ಎಂ. ಸಿದ್ದರಾಮಸ್ವಾಮಿ ಮಾತನಾಡಿ, 2022-23ನೇ ಸಾಲಿನ ಚಟುವಟಿಕೆಗಳ ವರದಿ, ಲೆಕ್ಕಪತ್ರಗಳ ವರದಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಜಿಲ್ಲಾ ಸಂಸ್ಥೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಶಾಲಾ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಬಿರಾದಾರ, ವಕೀಲರಾದ ರಾಘವೇಂದ್ರ ಪಾನಗಂಟಿ, ಉಪಾಧ್ಯಕ್ಷ ಅರುಣಾ ವಸ್ತ್ರದ, ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ, ಕಲ್ಯಾಣ ಕರ್ನಾಟಕ ಉಸ್ತುವಾರಿ ಪಿ.ಮಲ್ಲೇಶ್ವರಿ ಜುಜಾರೆ ಸೇರಿದಂತೆ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ, ಖಜಾಂಚಿ, ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.