ಸಾರಾಂಶ
ರಾಮನಗರ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಎಸ್ ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಆರ್ ಎಸ್ ಎಸ್ ನಲ್ಲಿರುವ ವಿಷ ಜಂತುಗಳು ಈ ರೀತಿಯ ಹೇಳಿಕೆ ನೀಡುವುದು ಹೊಸದಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೂ ಬಂಧಿಸಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಟ್ರೀಯತೆ ತೋರಿಸುತ್ತಿದೆ ಎಂದು ಟೀಕಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂರ ಅಧಿಕ ಸಂಖ್ಯೆಯ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮೌನವಾಗಿದೆ. ಸರ್ಕಾರ ಮಹಿಳೆಯರಿಗೆ ಬಿಟ್ಟಿ ಭಾಗ್ಯ ನೀಡಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ತಕ್ಷಣ ಕಲ್ಲಡ್ಕ ಪ್ರಭಾರಕ ಭಟ್ಟರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.ಮರ್ಯಾದೆ ಪುರುಷೋತ್ತಮ ರಾಮನನ್ನು ಹಿಂದೂ ಧಾರ್ಮಿಕತೆಗೆ ಬಳಸಿಕೊಂಡು ವೈಭವೀಕರಿಸುವ ಇವರು, ಕಾಲ ಕಾಲಕ್ಕೆ ಇಂತಹ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ನಾಗರಿಕ ಸಮಾಜದ ವರ್ತನೆಗಳನ್ನು ತಿರಸ್ಕರಿಸುವ ಇವರ ಹೇಳಿಕೆಗಳು ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವಲ್ಲದೇ ಎಲ್ಲ ಸಮುದಾಯದ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ಟೀಕಿಸಿದರು.
2 ಬಿ ಮೀಸಲಾತಿಯನ್ನು ಮರು ಸ್ಥಾಪಿಸಬೇಕು. ಹಿಜಾಬ್ ನಿಷೇಧವನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹ ಪಡಿಸಿದರು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷಾ, ಪ್ರಧಾನ ಕಾರ್ಯದರ್ಶಿ ಅಮ್ಜದ್ ಷರೀಫ್ , ರಾಮನಗರ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಫೈರೋಜ್ ಅಲಿ ಖಾನ್ , ಮುಖಂಡರಾದ ಅಫ್ರೋಜ್ ಅಲಿ ಖಾನ್, ಮಹಬೂಬ್ ಪಾಷಾ, ಆರಿಫ್ ಪಾಷಾ, ನಿಸಾರ್ ಅಹಮದ್, ಮತೀನ್ ಭಾಗವಹಿಸಿದ್ದರು.(ಫೋಟೋ ಕ್ಯಾಪ್ಷನ್)ರಾಮನಗರದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.