ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2025-26 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ಟನ್ನು ಮಾರ್ಚ್ ತಿಂಗಳಲ್ಲಿ ಮಂಡಿಸಲಿದ್ದು, ಅದರಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಉಪಾಧ್ಯಕ್ಷರಾದ ನಝೀರ್ ಅಹಮದ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯ ಬೇಟಿಯಾದ ನಿಯೋಗವು, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸಬೇಕು, ಜಿಲ್ಲೆಯಲ್ಲಿ ಸುಮಾರು ಶೇ 8 ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ತಾಲೂಕುಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಬೇಕು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಿಸಬೇಕು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು, ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ದೇಶದಲ್ಲೇ ಖ್ಯಾತಿಯನ್ನು ಗಳಿಸಿರುವ ಜಿಲ್ಲೆಯ ವಿಶೇಷ ಕೃಷಿಗಳಾದ ಮಟ್ಟು ಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆಗಳಿಗೆ ಪ್ರೋತ್ಸಾಹ ನೀಡಬೇಕು, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುದಾನವನ್ನು ಮೀಸಲಿಡಬೇಕು ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು.
ಈ ನಿಯೋಗದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಮುಖಂಡ ಹಸೈನಾರ್ ಕಟಪಾಡಿ, ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಮಹಮ್ಮದ್ ಅಶ್ರಫ್ ಬಾವ, ಉಪಾಧ್ಯಕ್ಷ ರಹೀಮ್ ಆದಿಉಡುಪಿ ಉಪಸ್ಥಿತರಿದ್ದರು.