ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 6,46,801 ತರಗತಿ ವಿದ್ಯಾರ್ಥಿಗಳು (ಫ್ರೆಷರ್ಸ್), 50,540 ಪುನರಾವರ್ತಿತ, 13,022 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ಮಂದಿ ನೋಂದಾಯಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ವದಂತಿ ಹಬ್ಬಿಸಿದರೆ ತಕ್ಷಣ ದೂರು:
ಪ್ರಶ್ನೆಪತ್ರಿಕೆ ಸೋರಿಕೆ ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವಂಥವರ ಮೇಲೆ ನಿಗಾ ಇರಿಸಲಾಗುತ್ತದೆ. ಜೊತೆಗೆ ಇಂಥ ಅಕ್ರಮ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ತಕ್ಷಣ ದೂರು ದಾಖಲಿಸಲು ರಾಜ್ಯಮಟ್ಟದಲ್ಲಿ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುತ್ತಿದ್ದೇವೆ. ಜೊತೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ತಕ್ಷಣ ದೂರು ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. -ಕೋಟ್-ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದೆ, ಅತ್ಯಂತ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು, ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷಾ ಸಿದ್ಧತೆಗೆ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಸುಳ್ಳು ವಿಚಾರಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೋಸ ಹೋಗಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಲಾಗುವುದು.
-ಪ್ರಕಾಶ್ ಜಿ.ಟಿ.ನಿಟ್ಟಾಲಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು