ಸಾರಾಂಶ
ಹಾವೇರಿ: ದ್ವಿತೀಯ ಪಿಯುಸಿ ಪರೀಕ್ಷೆ- 3 ಇದೇ ಜೂ. 9ರಿಂದ 20ರ ವರೆಗೆ ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 3ರ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಪರೀಕ್ಷಾ ಗೌಪ್ಯತೆ ಕಾಪಾಡಿಕೊಳ್ಳಬೇಕು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.ತ್ರಿ ಸದಸ್ಯ ಕಮಿಟಿ: ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡುಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನಕ್ಕೆ ಜಿಪಿಎಸ್ ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಬಂದೋಬಸ್ತನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಗಡಿಯಾರ, ಫ್ಯಾನ್, ಬೆಳಕಿನ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಹೊಂದಿರಬೇಕು. ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡುವಾಗ ವಿಜ್ಞಾನ ಉಪನ್ಯಾಸಕರನ್ನು ಕಲಾ- ವಾಣಿಜ್ಯ ವಿಷಯಗಳಿಗೆ ಹಾಗೂ ಕಲಾ- ವಾಣಿಜ್ಯ ವಿಭಾಗದ ಉಪನ್ಯಾಸಕರನ್ನು ವಿಜ್ಞಾನ ವಿಷಯದ ಪರೀಕ್ಷೆಗೆ ನಿಯೋಜಿಸಬೇಕು. ಕೊಠಡಿ ಮೇಲ್ವಿಚಾರಕರ ಮಕ್ಕಳು ಪರೀಕ್ಷೆ ಬರೆಯುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು ನಿಯೋಜಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ ಮಾತನಾಡಿ, ಪರೀಕ್ಷೆ ತಯಾರಿ ಬಗ್ಗೆ ಮಾಹಿತಿ ನೀಡಿದರು.ಪರೀಕ್ಷೆ ಕೇಂದ್ರಗಳು: ಬ್ಯಾಡಗಿಯ ಸರ್ಕಾರಿ ಎಸ್‌ಜೆಜೆಎಂ ಪಪೂ ಕಾಲೇಜು, ಹಿರೇಕೆರೂರಿನ ಕೆ.ಎಚ್. ಪಾಟೀಲ್ ಪಪೂ ಕಾಲೇಜು, ಸವಣೂರಿನ ಸರ್ಕಾರಿ ಮಜೀದ್ ಪಪೂ ಕಾಲೇಜು, ರಾಣಿಬೆನ್ನೂರಿನ ಆರ್.ಆರ್. ಬಾಲಕಿಯರ ಪಪೂ ಕಾಲೇಜು, ಶಿಗ್ಗಾಂವಿಯ ಎಸ್‌ಬಿಬಿಎಂಡಿ ಪಪೂ ಕಾಲೇಜು, ಹಾವೇರಿ ಹಾಗೂ ಹಾನಗಲ್ಲಿನ ಸರ್ಕಾರಿ ಪಪೂ ಕಾಲೇಜಿನಲ್ಲಿ ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ವಿವಿಧ ತಾಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))