ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಮಾರ್ಗಸೂಚಿ ಪಾಲಿಸಲು ಸೂಚನೆ

| N/A | Published : Feb 21 2025, 12:51 AM IST / Updated: Feb 21 2025, 06:23 AM IST

ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಮಾರ್ಗಸೂಚಿ ಪಾಲಿಸಲು ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 15,991 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 26 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

 ಚಿತ್ರದುರ್ಗ : ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 15,991 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 26 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಗೌಪ್ಯತೆ, ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಕಾರ್ಯ ನಿರ್ವಹಿಸಬೇಕೆಂದು ತಾಕೀತು ಮಾಡಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ತಹಸೀಲ್ದಾರ್‌, ಬಿಇಒ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರನ್ನು ಒಳಗೊಂಡ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಸಹ ಮುಖ್ಯ ಅಧೀಕ್ಷಕರು ಹಾಗೂ ಜಾಗೃತ ದಳಗಳನ್ನು ನೇಮಿಸಲಾಗಿದೆ. ಪರೀಕ್ಷೆ ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‍ಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡ್ಯೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 8 ಮಾರ್ಗಗಳ ತಂಡಕ್ಕೆ ಪ್ರತಿ ತಾಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ (ಗನ್ ಮ್ಯಾನ್) ಬೇಕಾಗಿರುತ್ತದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಎರಡು ಗಂಟೆ ಮುಂಚಿತವಾಗಿ ಬೆಳಿಗ್ಗೆ 8ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆಗೆ ಜಿಲ್ಲೆಯ 15,991 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 26 ಪರೀಕ್ಷಾ ಕೇಂದ್ರಗಳಿಗೆ 139 ಕಾಲೇಜುಗಳು ಟ್ಯಾಗ್ ಆಗಿವೆ ಎಂದು ಪುಟ್ಟಸ್ವಾಮಿ ತಿಳಿಸಿದರು.

ಚಿತ್ರದುರ್ಗ ತಾಲೂಕಿನಲ್ಲಿ 10 ಪರೀಕ್ಷಾಕೇಂದ್ರಗಳಿಗೆ 6450 ವಿದ್ಯಾಥಿಗಳು, ಚಳ್ಳಕೆರೆ ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳಿಗೆ 2986 ವಿದ್ಯಾರ್ಥಿಗಳು, ಹಿರಿಯೂರು ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳಿಗೆ 1946 ವಿದ್ಯಾರ್ಥಿಗಳು, ಹೊಸದುರ್ಗ 4 ಪರೀಕ್ಷಾ ಕೇಂದ್ರಗಳಿಗೆ 2151 ವಿದ್ಯಾರ್ಥಿಗಳು, ಮೊಳಕಾಲ್ಮುರು 2 ಪರೀಕ್ಷಾ ಕೇಂದ್ರಗಳಿಗೆ 977 ವಿದ್ಯಾರ್ಥಿಗಳು ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಿಗೆ 672 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 26 ಪರೀಕ್ಷಾ ಕೇಂದ್ರಗಳಿಂದ 15991 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ಎಲ್ಲ ತಾಲೂಕಿನ ತಹಸೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಸಭೆಯಲ್ಲಿದ್ದರು.