ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.1ರಿಂದ 22ರವರೆಗೆ ನಡೆಯಲಿದ್ದು, 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 11,712 ವಿದ್ಯಾರ್ಥಿಗಳು ಹಾಜರಾಗಲಿದ್ದು, ಅಧಿಕಾರಿಗಳು ಪರೀಕ್ಷೆಗೆ ಎಲ್ಲಾ ಸಿದ್ಧತೆ ಕೈಗೊಂಡು ಪರೀಕ್ಷೆಗಳು ಸುವ್ಯವಸ್ಥಿತವಾಗಿ, ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಪರೀಕ್ಷಾ ಕೇಂದ್ರಗಳಿಗೆ ಒಟ್ಟು 94ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಜೋಡಿಸಲಾಗಿದೆ ಎಂದರು.
ಯಾದಗಿರಿ ನಗರದ ಎಲ್ಲಾ ಪಿಯುಸಿ ಕಾಲೇಜುಗಳಾದ ಸರ್ಕಾರಿ ಪಿಯು ಕಾಲೇಜು, ನ್ಯೂಕನ್ನಡ ಕಾಲೇಜು, ಜವಾಹರ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಸಭಾ ಕಾಲೇಜು, ಮಹಾತ್ಮಗಾಂಧಿ ಕಾಲೇಜು, ಶಹಾಪುರದ ಸರ್ಕಾರಿ ಬಾಯ್ಸ್ ಕಾಲೇಜು, ಸರ್ಕಾರಿ ಭೀಮರಾಯನಗುಡಿ, ಸರ್ಕಾರಿ ಮಹಿಳಾ ಕಾಲೇಜು, ಸಿಬಿ ಕಾಲೇಜು, ಎಸ್.ಬಿ. ದರ್ಶನಾಪೂರ ಕಾಲೇಜು, ಸುರಪುರದ ಸರ್ಕಾರಿ ಬಾಯ್ಸ್ ಕಾಲೇಜು, ಪ್ರಭು ಕಾಲೇಜು, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಕಾಲೇಜು ರಂಗಂಪೇಟ, ಸರ್ಕಾರಿ ಕಾಲೇಜು ರಂಗಂಪೇಟ, ಸರ್ಕಾರಿ ಬಾಯ್ಸ್ ಕಾಲೇಜು ಗುರುಮಠಕಲ್, ಮಹಿಳಾ ಕಾಲೇಜು ಗುರುಮಿಠಕಲ್, ಸರ್ಕಾರಿ ಕಾಲೇಜು ಕೆಂಭಾವಿ, ಸರ್ಕಾರಿ ಕಾಲೇಜು ಹುಣಸಗಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಸಮೂಹ ಮಾಧ್ಯಮಗಳಲ್ಲಿ ಹಾಗೂ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧವಾಗಿರುತ್ತದೆ. ಒಂದು ವೇಳೆ ಕಂಡುಬಂದಲ್ಲಿ ಇಲಾಖಾ ಕ್ರಮದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಘೋಷಿಸಿ ಮತ್ತು ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಮಳಿಗೆ ಮುಚ್ಚುವಂತೆ ಆದೇಶಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಪೋನ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ ಬಿ, ಯಾದಗಿರಿ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಸೇರಿ ಇತರರಿದ್ದರು.