ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

| Published : Feb 27 2024, 01:35 AM IST

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ.

ಕನ್ನಡಪ್ರಭ ವಾರ್ತೆ ಮಡಿಕೇರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ. 1 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ ಕಲ್ಪಿಸಲು ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚು ಇದೆ ಎಂದು ಬಸ್ ನಿಲ್ದಾಣದಲ್ಲಿ ಬಸ್ಸು ನಿಲ್ಲಿಸದೆ ಹೋಗಬಾರದು, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರಬೇಕು. ಈಗಾಗಲೇ ಸರ್ಕಾರ ಪರೀಕ್ಷೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ತೋರಿಸಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶ್ರುಶೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು, ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸಲು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸಲಹೆ ಮಾಡಿದರು.

ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗಮನಹರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಪರೀಕ್ಷೆ ನಡೆಸಬೇಕು ಎಂದರು.

ಸರ್ಕಾರದ ನಿಯಮದಂತೆ ವಸ್ತ್ರ ಸಂಹಿತೆ(ಡ್ರೆಸ್‌ಕೋಡ್)ಯನ್ನು ಪಾಲಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡುವಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಿಯೋಜಿಸಿರುವ ಎಲ್ಲ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿರುವ ಕೆಲಸವನ್ನು ವ್ಯವಸ್ಥಿತವಾಗಿ ಮತ್ತು ಗಂಭೀರವಾಗಿ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಈ ಬಾರಿ 5,251 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಂಡಿದ್ದು, 4,709 ಹೊಸ ವಿದ್ಯಾರ್ಥಿಗಳು, 402 ಖಾಸಗಿ ವಿದ್ಯಾರ್ಥಿಗಳು ಮತ್ತು 140 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ 5, ಸೋಮವಾರಪೇಟೆ ತಾಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ರಹಸ್ಯ ಬಂಡಲ್‌ಗಳನ್ನು ಸರಬರಾಜು ಮಾಡಲು ಮಡಿಕೇರಿ 2, ಸೋಮವಾರಪೇಟೆ 3 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 2 ಒಟ್ಟು 7 ಮಾರ್ಗಗಳನ್ನು ಗುರುತಿಸಲಾಗಿದ್ದು, ಈ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು ಎಂದರು.

ಜಿಲ್ಲಾ ಖಜಾನೆಯಲ್ಲಿ ತ್ರಿಸದಸ್ಯ ಸಮಿತಿ ಅಧಿಕಾರಿಗಳಿಗೆ ಮತ್ತು ಎಲ್ಲ ಮಾರ್ಗ ಅಧಿಕಾರಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ನಿರ್ವಹಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇತರರು ಪಾಲ್ಗೊಂಡಿದ್ದರು.