ದ್ವಿತೀಯ ಪಿಯುಸಿ ಪರೀಕ್ಷೆ, 23 ಕೇಂದ್ರ, 12308 ವಿದ್ಯಾರ್ಥಿಗಳು ಪರೀಕ್ಷೆಗೆ

| Published : Mar 01 2024, 02:22 AM IST / Updated: Mar 01 2024, 02:23 AM IST

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ 1ರಿಂದ ಆರಂಭವಾಗಿ, ಮಾ. 22ರ ವರೆಗೆ ಜರುಗಲಿವೆ. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗ ಸೇರಿ ಒಟ್ಟು 12308 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ.

ಗದಗ:ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ 1ರಿಂದ ಆರಂಭವಾಗಿ, ಮಾ. 22ರ ವರೆಗೆ ಜರುಗಲಿವೆ. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗ ಸೇರಿ ಒಟ್ಟು 12308 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸುರಕ್ಷಿತ ಹಾಗೂ ಸುಸಜ್ಜಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಪ್ರಶ್ನೆ ಪತ್ರಿಕೆ ಸರಬರಾಜು ಕೇಂದ್ರವಾದ ಜಿಲ್ಲಾ ಖಜಾನೆ ಸೇರಿದಂತೆ 23 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲೂ 144 ಜಾರಿ ಮಾಡಲಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ 9, ಗಜೇಂದ್ರಗಡ 5, ರೋಣ 1, ನರಗುಂದ, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿಯಲ್ಲಿ ತಲಾ 2ರಂತೆ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೊಬ್ಬರಂತೆ 23 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪರೀಕ್ಷಾ ವೀಕ್ಷಕರನ್ನಾಗಿ, ತಲಾ ಪರೀಕ್ಷಾ ಕೇಂದ್ರದಲ್ಲಿ 4 ಜನರಂತೆ ಪ್ಲೆಯಿಂಗ್ ಸ್ಕ್ಯಾಡ್, ಜಿಲ್ಲಾ ಸ್ಕ್ಯಾಡ್‌ಗಳನ್ನು ನೇಮಕ ಮಾಡಲಾಗಿದೆ. 11146 ರೆಗ್ಯುಲರ್ ವಿದ್ಯಾರ್ಥಿಗಳು, 736 ರಿಪಿಟರ್ಸ್ ಹಾಗೂ 426 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 12308 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲಿದ್ದಾರೆ.

ಪ್ರತಿಬಂಧಕಾಜ್ಞೆ ಜಾರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಜರುಗಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪರೀಕ್ಷಾ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮೆರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು, ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.