ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶನಿವಾರದಿಂದ ನಡೆಯಲಿರುವ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದೆ.ಜಿಲ್ಲೆಯ 6 ತಾಲೂಕಿನ 24 ಪರೀಕ್ಷಾ ಕೇಂದ್ರಗಳಲ್ಲಿ 12052 ಹೊಸ ವಿದ್ಯಾರ್ಥಿಗಳು,131 ಖಾಸಗಿ ಅಭ್ಯರ್ಥಿಗಳು, 801 ಪುನರಾವರ್ತಿತ ವಿದ್ಯಾರ್ಥಿಗಳು, 01-ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿ ಒಟ್ಟು 12986 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಶನಿವಾರ ಪರೀಕ್ಷೆ ಬರೆಯಲಿದ್ದಾರೆ.
ಫೆ. 28ರಿಂದ ಮಾ.17ರವರೆಗೆ ಪರೀಕ್ಷೆ:ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ- 6 ಬಾಗೇಪಲ್ಲಿ ತಾಲೂಕಿನಲ್ಲಿ-3, ಗೌರಿಬಿದನೂರು ತಾಲೂಕಿನಲ್ಲಿ- 5, ಶಿಡ್ಲಾಘಟ್ಟ -3, ಗುಡಿಬಂಡೆ -1 ಹಾಗೂ ಚಿಂತಾಮಣಿ ತಾಲೂಕಿನಲ್ಲಿ-6 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಅಧೀಕ್ಷರೇ ಹೊಣೆ:
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು ಸಂಪೂರ್ಣ ಜವಾಬ್ದಾರಿ ಹೊಂದಿದ್ದು, ನಿಯಮಗಳಂತೆ ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ. ಪರೀಕ್ಷಾ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಹಾಗೂ ಆಸನಗಳ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕಾಲೇಜು ಆವರಣದಲ್ಲಿ ಸ್ಪಷ್ಟವಾಗಿ ಸೂಚನಾ ಫಲಕದಲ್ಲಿ ಪರೀಕ್ಷಾ ದಿನದಂದು ಪ್ರಕಟಿಸುವುದು ಕಡ್ಡಾಯ ಎಂದು ಇಲಾಖೆ ಮತ್ತು ಜಿಲ್ಲಾಡಳಿತ ಈಗಾಲೇ ಸೂಚನೆ ನೀಡಿದೆ ಎನ್ನಲಾಗಿದೆ.
ಉತ್ತಮ ಫಲಿತಾಂಶದ ಭರವಸೆ:ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭಕ್ಕೂ ಅರ್ಧ ಗಂಟೆ ಮೊದಲೇ ಹಾಜರಿರುವುದು ಕಡ್ಡಾಯ. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಓದಿಕೊಂಡು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಮರ್ಪಕವಾದ ಕುಡಿಯುವ ನೀರು,ಶೌಚಾಲಯ,ಆಸನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತವು ಪರೀಕ್ಷಾ ವಾತಾವರಣಕ್ಕೆ ಪೂರಕವಾದ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಖಾತರಿಪಡಿಸಬೇಕು. ಪರೀಕ್ಷಾ ಕೇಂದ್ರದ ಒಳಗೆ ಪೋಷಕರಿಗೆ ಪ್ರವೇಶ ನಿಷೇಧಿಸಲಾಗಿದೆ.ನಿರ್ಭೀತಿಯಿಂದ ಪರೀಕ್ಷೆಯನ್ನು ಎದುರಿಸಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಬೇಕು ಎಂಬುದು ಜಿಲ್ಲಾಧಿಕಾರಿ ಜಿ.ಪ್ರಭು ಕರೆ ನೀಡಿದ್ದಾರೆ.ವದಂತಿಗೆ ಕಿವಿಗೊಡಬೇಡಿ:
ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಇನ್‌ಸ್ಟಾಗ್ರಾಮ್, ವ್ಯಾಟ್ಸಪ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಇಂತಹ ವದಂತಿ ಹರಡಿಸುವವರ ವಿರುದ್ಧವೂ ಕ್ರಮ ಆಗಲಿದೆ ಎಂಬುದು ಜಿಲ್ಲಾಡಳಿತದ ಎಚ್ಚರಿಕೆ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳು ಸಕಲ ಭದ್ರತೆಯಲ್ಲಿ ಜವಾಬ್ದಾರಿಯುತ ಅಧಿಕಾರಿಗಳ ಸುಪರ್ದಿಯಲ್ಲಿ ಇರುವುದರಿಂದ ಆಯಾ ಅಧಿಕಾರಿಗಳು ಹೆಚ್ಚಿನ ಜಾಗೃತೆ ವಹಿಸಲು ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಇವುಗಳನ್ನು ಮಾಡಬಾರದು:
ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನಗಳನ್ನು ತೆಗೆದುಕೊಂಡು ಹೋಗಬಾರದು. ವಿದ್ಯಾರ್ಥಿಗಳಾಗಲಿ, ಸಿಬ್ಬಂದಿಯಾಗಲಿ ಮೊಬೈಲ್ ಬಳಕೆಗೆ, ಫೋಟೋಗ್ರಾಫಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಪೋಷಕರಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ನಿಷೇಧ ಹೇರಲಾಗಿದೆ.ಭದ್ರತೆಗೆ ಆಧ್ಯತೆ:
ಸುಸೂತ್ರವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತವು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೋಲಿಸ್ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಸಿಕೆಬಿ-1 ಜಿಲ್ಲಾಧಿಕಾರಿ ಜಿ.ಪ್ರಭು