ಸಾರಾಂಶ
ಜಿಲ್ಲೆಯ 6 ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಅತ್ಯಂತ ಯಶಸ್ವಿಯಾಗಿ ಶುರುವಾಗಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲೆಯ 6 ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಅತ್ಯಂತ ಯಶಸ್ವಿಯಾಗಿ ಶುರುವಾಗಿದೆ.ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳು ವೆಬ್ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಶನಿವಾರ ನಡೆದ ಕನ್ನಡ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 12,044 ವಿದ್ಯಾರ್ಥಿಗಳ ಪೈಕಿ ಹಾಜರಾಗಿ ಪರೀಕ್ಷೆ ಬರೆದವರು 11,601 ವಿದ್ಯಾರ್ಥಿಗಳು ಮಾತ್ರ. ಮೊದಲ ದಿನವೇ 443 ವಿದ್ಯಾರ್ಥಿಗಳು ಗೈರು ಹಾಜರಾಗುವ ಮೂಲಕ ಪರೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ಎಂದಿನಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಕೂಡ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ನೀಡದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿತ್ತು.ವಿದ್ಯಾರ್ಥಿಗಳು ಕೂಡ ಇಲಾಖೆ ಮಾರ್ಗಸೂಚಿಗಳಂತೆ ಅರ್ಧಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಬಂದು ನೋಟಿಸ್ ಬೋರ್ಡಿನಲ್ಲಿ ತಮ್ಮ ನೋಂದಣಿ ಸಂಖ್ಯೆ ಪರಿಶೀಲಿಸಿಕೊಂಡು ಕೊಠಡಿ ಯಾವುದೆಂದು ತಿಳಿದುಕೊಳ್ಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಮಕ್ಕಳನ್ನು ಪರೀಕ್ಷೆಗೆ ಕರೆದುಕೊಂಡು ಬಂದಿದ್ದ ಪೋಷಕರು 200 ಮೀ.ಆಚೆ ನಿಂತು ತಮ್ಮ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮರಿಸ್ವಾಮಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಗಳು ಸುಗಮವಾಗಿ ನಡೆಯುತ್ತಿವೆಯೋ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ನಕಲಿಗೆ ಅವಕಾಶ ನೀಡದಂತೆ ಇಲಾಖೆಯ ಸುತ್ತೋಲೆಯಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಸೂಚನೆ ನೀಡಿದರು.