ಸಾರಾಂಶ
ದೊಡ್ಡಬಳ್ಳಾಪುರ: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪಬ್ಲಿಕ್ ಪರೀಕ್ಷೆಗಳು ಮಾ.1ರಂದು ಶನಿವಾರದಿಂದ ಆರಂಭಗೊಳ್ಳಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 11,341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕ ಎನ್. ಮೋಹನ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ 20ವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಂಡಿರುವ ಸಿದ್ದತೆ ಕುರಿತು ಮಾಹಿತಿ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು-3, ದೇವನಹಳ್ಳಿ ತಾಲೂಕು-3, ಹೊಸಕೋಟೆ ತಾಲೂಕು-5 ಮತ್ತು ನೆಲಮಂಗಲ ತಾಲೂಕು-6 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲೆಡೆ ಸಕಲ ಸಿದ್ದತೆ ಮಾಡಲಾಗಿದೆ.11,341 ವಿದ್ಯಾರ್ಥಿಗಳ ನೋಂದಣಿ:
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ 11,341 ವಿದ್ಯಾರ್ಥಿಗಳ ಪೈಕಿ 10,757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಖಾಸಗಿ ಅಭ್ಯರ್ಥಿಗಳಿಗೆ ಒಂದೇ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.ಬಾಲಕಿಯರ ಸಂಖ್ಯೆ ಹೆಚ್ಚು :
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಲ್ಲಿ ಬಾಲಕಿಯರ ಸಂಖ್ಯೆ ಹೆಚ್ಚಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,247 ಬಾಲಕಿಯರು ಮತ್ತು 5,094 ಬಾಲಕರು ಬರೆಯಲಿದ್ದಾರೆ ಎಂದರು.ಪರೀಕ್ಷಾ ಕೇಂದ್ರಗಳ ವಿವರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಸರ್ಕಾರಿ ಪದವಿಪೂರ್ವ ಕಾಲೇಜು, 3 ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜು, 6 ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.ದೊಡ್ಡಬಳ್ಳಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು, ದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಸಕೋಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾದೇವ ಪದವಿ ಪೂರ್ವ ಕಾಲೇಜು, ವಿದ್ಯಾವನ ಪದವಿ ಪೂರ್ವ ಕಾಲೇಜು, ನಂದಗುಡಿ ಸರ್ಕಾರಿ ಪದವಿಪೂರ್ವ ಕಾಲೇಜು, ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪದವಿ ಪೂರ್ವ ಕಾಲೇಜು, ಬಸವೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಯ್ಸಳ ಪದವಿ ಪೂರ್ವ ಕಾಲೇಜು, ದಿವ್ಯ ಜ್ಯೋತಿ ಪದವಿ ಪೂರ್ವ ಕಾಲೇಜು, ತ್ಯಾಮಗ್ಲೊಂಡು ಸರ್ಕಾರಿ ಪದವಿಪೂರ್ವ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ.
ಉಚಿತ ಸಾರಿಗೆ ಸೌಲಭ್ಯ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿ.ಎಂ.ಟಿ.ಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯವಿದೆ. ವಿದ್ಯಾರ್ಥಿಗಳು ಉಚಿತ ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಸಕಲ ಸಿದ್ಧತೆ-ಭದ್ರತೆ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದರು.ಬಾಕ್ಸ್..............
ಪರೀಕ್ಷಾ ವೇಳಾಪಟ್ಟಿ:ಮಾ.1ರಂದು ಕನ್ನಡ ಮತ್ತ ಅರೇಬಿಕ್, ಮಾ.3ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4ಕ್ಕೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ.5ಕ್ಕೆ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.7ಕ್ಕೆ ಇತಿಹಾಸ, ಭೌತಶಾಸ್ತ್ರ, ಮಾ.10ಕ್ಕೆ ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ, ಮಾ.12ಕ್ಕೆ ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಮಾ.13ಕ್ಕೆ ಅರ್ಥಶಾಸ್ತ್ರ, ಮಾ.15ಕ್ಕೆ ಇಂಗ್ಲೀಷ್, ಮಾ.17ರಂದು ಭೂಗೋಳಶಾಸ್ತ್ರ, ಮಾ.18ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ, ಮಾ.19ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್ ಮತ್ತು ಮಾ.20ರಂದು ಹಿಂದಿ ವಿಷಯದ ಪರೀಕ್ಷೆಗಳು ನಡೆಯಲಿವೆ.
ಫೋಟೋ-27ಕೆಡಿಬಿಪಿ1-ಬೆಂ.ಗ್ರಾ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪ.ಪೂ ಉಪನಿರ್ದೇಶಕ ಮೋಹನ್ ಕುಮಾರ್, ದೊಡ್ಡಬಳ್ಳಾಪುರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದರು.