ಸಾರಾಂಶ
ಪೋಷಣ್ ಮಾಸಾಚರಣೆ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಸಹಯೋಗದೊಂದಿಗೆ ಪೋಷಣ್ ಅಭಿಯಾನ್ ಯೋಜನೆಯ ‘ಪೋಷಣ್ ಮಾಸಾಚರಣೆ-2024’ರ ಸಮಾರೋಪ ಸಮಾರಂಭ ಕಾರ್ಯಕ್ರಮ ಸೋಮವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನಡೆಯಿತು.ಪೋಷಣ್ ಮಾಸಾಚರಣೆ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ ಮಾತನಾಡಿ, ದೇಹ ಸುಸ್ಥಿರ ಅಭಿವೃದ್ಧಿಗೆ ಪೌಷ್ಠಿಕತೆಯ ಪ್ರಾಮುಖ್ಯತೆ ಮತ್ತು ಕಿಶೋರಿಯರ ಆರೈಕೆಯ ಕುರಿತು ವಿವರಿಸುತ್ತಾ ಪೌಷ್ಠಿಕ ಸಮಾಜ ನಿರ್ಮಾಣದತ್ತ ಹೆಜ್ಜೆ ಹಾಕೋಣ ಎಂದರು.ಮುಖ್ಯ ಅತಿಥಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ, ಗರ್ಭಿಣಿ ಬಾಣಂತಿಯರ ಆರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ತಿಳಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ್ ವಿ., ಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ್ ಪೈ ಆಗಮಿಸಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕಿ ಶ್ಯಾಮಲಾ ಸಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ. ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೀಪಾ ನಿರೂಪಿಸಿದರು. ಪೋಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕಿ ಚೈತ್ರಾ ವಂದಿಸಿದರು.ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳ ಪ್ರಾತ್ಯಕ್ಷಿಕೆಯಲ್ಲಿ ಸ್ಥಳೀಯ ಪೌಷ್ಟಿಕ ಆಹಾರಗಳು, ಸ್ಥಳೀಯ ಲಭ್ಯವಿರುವ ಹಣ್ಣು, ತರಕಾರಿಗಳು ಹಾಗೂ ಕರಾವಳಿಯ ಯಕ್ಷಗಾನ ವೇಶಭೂಷಣ, ವೀರಗಾಸೆ, ಕೋಲಾಟ, ಡೊಳ್ಳುಕುಣಿತ, ಭರತನಾಟ್ಯ ಮೊದಲಾದ ಚಿತ್ರಣಗಳನ್ನು ಸಿರಿಧಾನ್ಯಗಳ ಮೂಲಕ ಜೋಡಿಸಿ ಆಕರ್ಷಕವಾಗಿ ಪ್ರದರ್ಶಿಸಲಾಯಿತು.