ಸಾಂಸ್ಕೃತಿಕ ಸಂಭ್ರಮಕ್ಕೆ ಯುವ ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ

| Published : Aug 04 2025, 01:00 AM IST

ಸಾಂಸ್ಕೃತಿಕ ಸಂಭ್ರಮಕ್ಕೆ ಯುವ ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಯುವಸಮೂಹಕ್ಕೆ ಸ್ವಾತಂತ್ರ್ಯೋತ್ಸವದ ವಿಶೇಷ ಸಂದೇಶ ತಲುಪುವಂತೆ ಸಮಿತಿಗಳು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲು ಸಲಹೆ ನೀಡಿದ ಅವರು, ಯುವ ಸಂಭ್ರಮ ಕಾರ್ಯಕ್ರಮದ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಅವರಲ್ಲಿನ ಸೂಪ್ತ ಪ್ರತಿಭೆಯನ್ನು ದೇಶದ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶ.

ಧಾರವಾಡ: ಸ್ವಾತಂತ್ರ್ಯ ಹೋರಾಟದ ದಾರಿಯನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪರಿಚಯಿಸಲು ಯುವ ಸಮೂಹಕ್ಕಾಗಿ ಆ. 14 ರಂದು ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಸಂಭ್ರಮ ಯಶಸ್ವಿಯಾಗಿ ಜರಗಲು ಅನುಭವಿ ತಜ್ಞರು, ಕಲಾವಿದರು ಮತ್ತು ಕಲಾಸಂಘಟಕರು ಸಹಕಾರ ನೀಡಬೇಕು. ಕಾಲೇಜು ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಈ ಕುರಿತು ರಚಿಸಿರುವ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಸದಸ್ಯರ ಪೂರ್ವಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.

ಯುವಸಮೂಹಕ್ಕೆ ಸ್ವಾತಂತ್ರ್ಯೋತ್ಸವದ ವಿಶೇಷ ಸಂದೇಶ ತಲುಪುವಂತೆ ಸಮಿತಿಗಳು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲು ಸಲಹೆ ನೀಡಿದ ಅವರು, ಯುವ ಸಂಭ್ರಮ ಕಾರ್ಯಕ್ರಮದ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಅವರಲ್ಲಿನ ಸೂಪ್ತ ಪ್ರತಿಭೆಯನ್ನು ದೇಶದ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶ ಎಂದರು.

ವೇದಿಕೆ ಸಿದ್ಧತೆ, ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಹಾಗೂ ಆವರಣದ ಅಲಂಕಾರ ಅಚ್ಚುಕಟ್ಟಾಗಿ ಮಾಡಬೇಕು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಮತ್ತು ಸ್ಥಳೀಯ ಕಲಾವಿದರಿಂದ ನೃತ್ಯ, ನಾಟಕ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅವರಿಗೆ ಬೇಕಾದ ಕೊಠಡಿಗಳ ವ್ಯವಸ್ಥೆಯನ್ನು ಮಾಡಲು ಸೂಚಿಸಿದರು.

ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಕಾರ್ಯಕ್ರಮದ ಸಂಪೂರ್ಣ ಭದ್ರತೆ ಹಾಗೂ ಶಿಸ್ತುಪಾಲನೆಯನ್ನು ಖಚಿತಪಡಿಸಿಕೊಂಡು ಯಾವುದೇ ಅಡಚಣೆಗಳು ಆಗದ ಹಾಗೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಕರ್ನಾಟಕ ಕಾಲೇಜಿನ ಆವರಣದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಆಸನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ಸಾಂಸ್ಕೃತಿ ಕಾರ್ಯಕ್ರಮಗಳ ಆಯ್ಕೆ ಸಮಿತಿಯ ಸಭೆ ಜರುಗಿಸಿ, ಚರ್ಚಿಸಲಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಆಶಯದಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಜತೆಗೆ ತಾವು ಸಹ ಕಾರ್ಯಕ್ರಮ ಕೊಡುವುದಾಗಿ ಹೇಳಿದರು. ಜಿಪಂ ಸಿಇಓ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ ಇದ್ದರು.