ಜನೆವರಿಯಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ

| Published : Dec 26 2023, 01:31 AM IST / Updated: Dec 26 2023, 01:32 AM IST

ಜನೆವರಿಯಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದ್ದು, ಎಐಸಿಸಿ, ಕೆಪಿಸಿಸಿ ಸಮೀಕ್ಷೆ ಆಧರಿಸಿ ಜನೆವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು

ಕನ್ನಡಪ್ರಭ ವಾರ್ತೆ ಹಾವೇರಿ

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದ್ದು, ಎಐಸಿಸಿ, ಕೆಪಿಸಿಸಿ ಸಮೀಕ್ಷೆ ಆಧರಿಸಿ ಜನೆವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಲೋಕಸಭಾ ಕ್ಷೇತ್ರಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಅವರು ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರ ಅಭಿಪ್ರಾಯ ಆಲಿಸಿ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚಿಸಿದರೆ ಶಾಸಕರು, ಸಚಿವರು ಸಹ ಅಭ್ಯರ್ಥಿ ಆಗುತ್ತಾರೆ ಎಂದರು.

ನಮ್ಮ ಗ್ಯಾರಂಟಿಗಳನ್ನು ನಂಬಿ ಜನ ಅಧಿಕಾರ ಕೊಟ್ಟಿದ್ದಾರೆ. ನಾವೂ ಸಹ 4 ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಇನ್ನೊಂದು ಯುವನಿಧಿ ಗ್ಯಾರಂಟಿಯನ್ನು ಜ. 12ರಿಂದ ಆರಂಭಗೊಳ್ಳಲಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ನುಡಿದಂತೆ ನಡೆದಿದ್ದೇವೆ. ಜನೆವರಿಯಲ್ಲಿ ನಮ್ಮ ಕಾರ್ಯಕ್ರಮಗಳ ಕುರಿತು ಸಮಾವೇಶ ಆಯೋಜಿಸಲಿದ್ದೇವೆ. ರಾಜ್ಯದ ಜನತೆ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಲೋಕಸಭೆ, ರಾಜ್ಯಸಭೆಯಲ್ಲಿ ವಿಪಕ್ಷಗಳು ಟೀಕೆ ಮಾಡೋದು ಸಹಜ. ಅದಕ್ಕೆ ಆಡಳಿತ ಪಕ್ಷ ಉತ್ತರ ಕೊಡಬೇಕು. ಆದರೆ, ವಿಪಕ್ಷಗಳ ಟೀಕೆ ಸಹಿಸದೇ 150 ಸಂಸತ್ ಸದಸ್ಯರನ್ನು ಅಮಾನತು ಮಾಡಿದ್ದು ಪ್ರಜಾಪ್ರಭುತ್ವಕ್ಕೆ ಮಾರಕ, ಕೊಡಲಿ ಪೆಟ್ಟು ಕೊಟ್ಟಂತಾಗಿದೆ. ಇದೊಂದು ಹಿಟ್ಲರ್ ಆಡಳಿತವಾಗಿದೆ. ಮೋದಿಯವರು ಮೊದಲು ಸಂಸತ್ ರಕ್ಷಣೆ ಮಾಡಲಿ. ಎಲ್ಲಿ ತಮ್ಮ ಬಣ್ಣ ಬಯಲಾಗುತ್ತದೆ ಎಂದುಕೊಂಡು ಸಂಸದರನ್ನು ಅಮಾನತು ಮಾಡಿದ್ದಾರೆ. ಇದು ದುರದೃಷ್ಟಕರ ಸಂಗತಿ. ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ವಿಶ್ವಾಸ ಇಲ್ಲ, ಸಂಸದರ ಅಮಾನತ್ತು ಪ್ರಕರಣ ಖಂಡಿಸಿ ನಾವು ಪ್ರತಿಭಟಿಸಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಜನರೇ ಇದಕ್ಕೆ ತಕ್ಕ ಉತ್ತರ ನೀಡಲಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಬರೀ ಸುಳ್ಳು ಹೇಳುತ್ತಾ ಕಾಲಹರಣ ಮಾಡಿದ್ದಾರೆ. ಮುಂದಿನ ಮೂರು ತಿಂಗಳ ಕಾಲ ನಾವು ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುತ್ತೇವೆ. ಜತೆಗೆ ಕೇಂದ್ರ ಸರ್ಕಾರದ ವೈಫಲ್ಯಗಳನ್ನೂ ಸಹ ಜನರ ಮುಂದಿಡುತ್ತೇವೆ. ಬೆಲೆ ಏರಿಕೆ, ಕಪ್ಪು ಹಣ ತರುತ್ತೇವೆ ಎಂದು ಸುಳ್ಳು ಹೇಳಿದ್ದು, ನಿರುದ್ಯೋಗದ ಕುರಿತು ಜನರಿಗೆ ಮನದಟ್ಟು ಮಾಡುತ್ತೇವೆ. ನಾವು ಯಾವುದೇ ಚುನಾವಣೆ ಮುಂದೂಡುವ ಯತ್ನ ಮಾಡಲ್ಲ, ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು.

ಬರಗಾಲದಲ್ಲಿ ರಾಜಕಾರಣ ಸಲ್ಲ:

ರಾಜ್ಯದಲ್ಲಿ ಬರ ಆವರಿಸಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಬರ ಪರಿಹಾರ ನೀಡಬೇಕು. ಮುಖ್ಯಮಂತ್ರಿಗಳು ಪ್ರಧಾನಿಯವರನ್ನು ಭೇಟಿ ಮಾಡಿ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ ಎರಡು ತಿಂಗಳಾಗಿದೆ. ಆದರೂ ಪರಿಹಾರ ಬಿಡುಗಡೆ ಆಗದಿರುವುದು ಏಕೆ ಎಂಬುದೇ ನಮಗೆ ಅರ್ಥವಾಗುತ್ತಿಲ್ಲ. ಬರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ, ಕೂಡಲೇ ರಾಜ್ಯದ ಸಂಸದರು, ಕೇಂದ್ರ ಸಚಿವರು ಪ್ರಧಾನಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸುವ ಕೆಲಸ ಮಾಡಬೇಕು ಎಂದು ಸಲೀಂ ಅಹ್ಮದ್‌ ಆಗ್ರಹಿಸಿದರು.