ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಪುನರ್ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಜಾರಿಗೊಂಡಿರುವ "ಸಂಘಟನ್ ಸೃಜನ್ ಅಭಿಯಾನ.
ಹುಬ್ಬಳ್ಳಿ:
ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಪುನರ್ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಜಾರಿಗೊಂಡಿರುವ "ಸಂಘಟನ್ ಸೃಜನ್ ಅಭಿಯಾನ "ದಡಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಎಐಸಿಸಿ ವೀಕ್ಷಕ ಸಯ್ಯದ್ ಅಜ್ಮತ್‌ಉಲ್ಲಾ ಹುಸೇನಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಅಹ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಾಯಕರು ಸಂಘಟನಾ ಪುನರ್ ರಚನೆಗೆ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಅದರಂತೆ ದೇಶಾದ್ಯಂತ ಈ ಅಭಿಯಾನ ಆರಂಭಿಸಲಾಗಿದೆ. ಗುಜರಾತ್‌ನಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾದ ಬಳಿಕ ಇದೀಗ ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಎಐಸಿಸಿ ಹಾಗೂ ಕೆಪಿಸಿಸಿ ವೀಕ್ಷಕರು ಜಿಲ್ಲಾವಾರು ಪ್ರವಾಸ ಕೈಗೊಂಡಿದ್ದಾರೆ. ಮೊದಲ ಹಂತದಲ್ಲಿ ಜಿಲ್ಲಾ ಮತ್ತು ನಗರ ಕಾಂಗ್ರೆಸ್ ಸಮಿತಿಗಳ ಸಭೆ ನಂತರ ಬ್ಲಾಕ್, ವಿಧಾನಸಭಾ ಕ್ಷೇತ್ರ ಹಾಗೂ ಪಂಚಾಯಿತಿ ಮಟ್ಟದ ಸಭೆ ನಡೆಯಲಿವೆ. ಹಾಲಿ ಮತ್ತು ಮಾಜಿ ಶಾಸಕರು, ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಘಟಕಗಳ ಮುಖಂಡರು ಸೇರಿದಂತೆ ಎಲ್ಲ ಕಾರ್ಯಕರ್ತರ ಅಭಿಪ್ರಾಯವನ್ನು ವೈಯಕ್ತಿಕವಾಗಿ ಸಂಗ್ರಹಿಸಲಾಗುವುದು ಎಂದು ವಿವರಿಸಿದರು.ಈ ಹಿಂದೆ ಕೆಲವೇ ನಾಯಕರು ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಪದ್ಧತಿ ಇತ್ತು. ಆದರೆ, ಈಗ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯಕ್ಕೂ ಸಮಾನ ಮಹತ್ವ ನೀಡಲಾಗುತ್ತಿದೆ. ಸಂಘಟನೆಯನ್ನು ಮುನ್ನಡೆಸುವ ಸಾಮರ್ಥ್ಯ, ಜನಸಂಪರ್ಕ, ಪಕ್ಷದ ಸಿದ್ಧಾಂತಗಳಿಗೆ ಬದ್ಧತೆ, ಸೇವಾ ಮನೋಭಾವ ಹಾಗೂ ಕಾರ್ಯಾನುಭವದ ಆಧಾರದ ಮೇಲೆ ಸಮರ್ಥ ನಾಯಕರನ್ನು ಗುರುತಿಸಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕತ್ವಕ್ಕೆ ವರದಿ ಸಲ್ಲಿಸಲಾಗುತ್ತದೆ. ಅಂತಿಮವಾಗಿ ಕೆಪಿಸಿಸಿ ಹಾಗೂ ಎಐಸಿಸಿ ನಾಯಕತ್ವ ಜಿಲ್ಲಾಧ್ಯಕ್ಷರ ನೇಮಕಾತಿ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ವಿಪ ಸದಸ್ಯ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಕಾರ್ಯಕರ್ತರ ವಿಶ್ವಾಸ, ಅಭಿಪ್ರಾಯ ಮತ್ತು ಸಂಘಟನೆಗೆ ನೀಡಿದ ಕೊಡುಗೆಯೇ ಪ್ರಮುಖ ಮಾನದಂಡವಾಗಲಿದೆ. ಕಾರ್ಯಕರ್ತರ ಭಾವನೆಗಳಿಗೆ ಅನುಗುಣವಾಗಿ ಸಮರ್ಥ ನಾಯಕರನ್ನು ಆಯ್ಕೆ ಮಾಡಲಾಗುವುದು. ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಹಾಗೂ ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ವ್ಯಕ್ತಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದರು.ಎಐಸಿಸಿ ನೇಮಕ ಮಾಡಿರುವ ವೀಕ್ಷಕರು ಜಿಲ್ಲೆಯಲ್ಲೇ ಸುಮಾರು 7 ದಿನ ತಂಗಿ ಬ್ಲಾಕ್ ಮಟ್ಟದ ಸಭೆ ನಡೆಸಲಿದ್ದಾರೆ. ಬ್ಲಾಕ್ ಅಧ್ಯಕ್ಷರು, ಕಾರ್ಯಕರ್ತರು, ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು ಸೇರಿದಂತೆ ಎಲ್ಲರೊಂದಿಗೆ ಪ್ರತ್ಯೇಕವಾಗಿ ಭೇಟಿ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಬಳಿಕ ಈ ಎಲ್ಲ ಮಾಹಿತಿಯನ್ನು ಎಐಸಿಸಿಗೆ ವರದಿ ರೂಪದಲ್ಲಿ ಸಲ್ಲಿಸಲಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾಧ್ಯಕ್ಷರ ಆಯ್ಕೆಯ ಅರ್ಜಿ ಬಿಡುಗಡೆಗೊಳಿಸಲಾಯಿತು. ಜಿಲ್ಲಾಧ್ಯಕ್ಷರಾದ ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ, ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ, ಬಿ.ಆರ್. ಯಾವಗಲ್, ದೀಪಕ ಚಿಂಚೂರಿ, ವಿನೋದ ಅಸೂಟಿ ಸೇರಿದಂತೆ ಹಲವರಿದ್ದರು.