ರಾಮನಗರ ಕ್ಷೇತ್ರದಲ್ಲಿರುವ ಬಡ ಜನರಿಗೆ ನಿವೇಶನ ಒದಗಿಸಲು 300 ಎಕರೆ ಸರ್ಕಾರಿ ಜಾಗ ಗುರುತಿಸಲಾಗಿದೆ. ಡಿಸೆಂಬರ್ ತಿಂಗಳಿನಿಂದ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮಗನರ
ರಾಮನಗರ ಕ್ಷೇತ್ರದಲ್ಲಿರುವ ಬಡ ಜನರಿಗೆ ನಿವೇಶನ ಒದಗಿಸಲು 300 ಎಕರೆ ಸರ್ಕಾರಿ ಜಾಗ ಗುರುತಿಸಲಾಗಿದೆ. ಡಿಸೆಂಬರ್ ತಿಂಗಳಿನಿಂದ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿವೇಶನಗಳ ಹಂಚಿಕೆಗಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ನಗರ ಮತ್ತು ಗ್ರಾಮಗಳಲ್ಲಿ ವಾರ್ಡ್ ಸಮಿತಿ ರಚಿಸಲಾಗುವುದು. ನಾನೇ ಖುದ್ದಾಗಿ ಮುಂದೆ ನಿಂತು ವಾರ್ಡ್ ಸಮಿತಿ ಸಭೆಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇನೆ ಎಂದು ತಿಳಿಸಿದರು.
ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 10 ಸಾವಿರ ನಿವೇಶನ ನೀಡಲು ಮುಖ್ಯಮಂತ್ರಿ ಚಿಂತಿಸಿ ಕಾರ್ಯಪ್ರವೃತ್ತರಾಗಿದ್ದು, ಅದಕ್ಕಾಗಿ ಸರ್ಕಾರಿ ಜಮೀನು ಗುರುತಿಸಲಾಗುತ್ತಿದೆ. ನಿವೇಶನ ರಹಿತರಿಗೆ ಹಾಗೂ ಬಡವರಿಗೆ ನಿವೇಶನ ಒದಗಿಸಲು ಈ ಜಿಲ್ಲೆಯಲ್ಲಿ 1300 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ರಾಮನಗರ ಕ್ಷೇತ್ರದಲ್ಲಿ 300 ಎಕರೆ ಸರ್ಕಾರಿ ಜಾಗ ಗುರುತಿಸಲಾಗಿದ್ದು, ಸುಮಾರು 27 ಕೋಟಿ ರುಪಾಯಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಸೇರಿ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. ಸುಸಜ್ಜಿತ ಬಡಾವಣೆಗಳನ್ನು ಅಭಿವೃದ್ಧಿ ಪಡಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.ರಾಮನಗರ ಕಸಬಾ ಹಾಗೂ ಕೈಲಾಂಚಕ್ಕೆ ಕುಡಿಯುವ ನೀರು ಒದಗಿಸಲು ಮಂಚನಬೆಲೆಯಿಂದ ಪೈಪ್ಲೈನ್ ವ್ಯವಸ್ಥೆ ಮಾಡಲಾಗಿದೆ. 300 ಕೋಟಿ ರುಪಾಯಿ ವೆಚ್ಚದಲ್ಲಿ ಪೈಪ್ಲೈನ್ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರತಿ ಮನೆಗೂ ಕುಡಿಯುವ ನೀರು ಪೂರೈಸಲಾಗುವುದು. ಇದನ್ನು ಮಾರ್ಚ್ 31ರೊಳಗೆ ಅನುಷ್ಠಾನಗೊಳಿಸಲಾಗುವುದು ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.ಸಮಸ್ಯೆ ಪರಿಹಾರ ವೇದಿಕೆ :
ಜನ ಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಜಾಸೇವಾ ಆಂದೋಲನ ಸೂಕ್ತ ವೇದಿಕೆಯಾಗಿದೆ. ಜನರ ಕುಂದುಕೊರತೆಗಳಿಗೆ ಸ್ಪಂದಿಸುವುದು, ಬಡವರು ಮತ್ತು ದುರ್ಬಲ ವರ್ಗಗಳಿಗೆ ನೆರವಾಗುವುದು, ಸರ್ಕಾರಿ ಸೌಲಭ್ಯಗಳು ಅರ್ಹ ಫಲಾನುಭಗಳಿಗೆ ತಲುಪುವಂತೆ ಜಾಗೃತಿ ಮೂಡಿಸುವುದು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಒತ್ತು ನೀಡುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಗುರಿಗಳಾಗಿವೆ ಎಂದು ತಿಳಿಸಿದರು.ಜನರ ಅಹವಾಲುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಸ್ಪಂದಿಸಲಾಗುತ್ತಿದೆ. ಇದು ಸಾಧಾರಣವಾದ ಕಾರ್ಯಕ್ರಮವಲ್ಲ. ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಎಲ್ಲಾ ವರ್ಗದ ಜನರ ದುಃಖ ದುಮ್ಮಾನಗಳನ್ನು ಸ್ಥಳದಲ್ಲಿಯೇ ಪರಿಹರಿಸಿ, ಅಹವಾಲುಗಳ ವಿಲೇವಾರಿ ಮಾಡಲಾಗುವುದು ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ. ಮಂಜುನಾಥ್ ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಕಾಲಮಿತಿಯೊಳಗೆ ಹಾಗೂ ಗುಣಾತ್ಮಕವಾಗಿ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು, ‘ಪ್ರಜಾ ಸೇವಾ ತಂತ್ರಾಂಶದಲ್ಲಿ ನೋಂದಾಯಿತವಾಗುವ ಎಲ್ಲಾ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ‘ಕರ್ನಾಟಕ ಸಕಾಲ ಸೇವೆಗಳ ಕಾಯ್ದೆ, 2011''''''''''''''''ರ ವ್ಯಾಪ್ತಿಗೆ ತಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಹೊಲಿಗೆಯಂತ್ರ, ಟ್ಯಾಕ್ಸಿಗಳು, ಟಾರ್ಪಲ್ಗಳು, ಹಕ್ಕುಪತ್ರಗಳು ಸೇರಿ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಸೌಲಭ್ಯಗಳನ್ನು ವಿತರಿಸಿದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಪಂ ಮಾಜಿ ಅಧ್ಯಕ್ಷ ಕೆ.ರಮೇಶ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ನರಸಿಂಹಮೂರ್ತಿ, ತಾಪಂ ಇಒ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.