ಮಹಿಳಾ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ಪೂರಕ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

| Published : Aug 15 2024, 01:55 AM IST

ಮಹಿಳಾ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ಪೂರಕ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಸಂಜೀವಿನಿ ಡೇ‌-ನಲ್ಮ್‌ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನದಲ್ಲಿ ಮಾತನಾಡಿದರು.

-ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ವಸ್ತು ಪ್ರದರ್ಶನ, ಮಾರಾಟ ಮೇಳಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಡೇ‌-ನಲ್ಮ್‌ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಸರ್ಕಾರ ಕೂಡ ಬೆಂಬಲ ನೀಡಿ ಮೇಳಗಳನ್ನು ಆಯೋಜಿಸಿ ಮಹಿಳೆಯರು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳು, ಕರಕುಶಲ ವಸ್ತುಗಳು, ಸೀರೆ-ಬಟ್ಟೆ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೇಳಗಳು ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ‌ ಮಾತನಾಡಿ, ಡೇ‌-ನಲ್ಮ್‌ ಯೋಜನೆಯಡಿ ಸೌಲಭ್ಯ ಪಡೆದುಕೊಂಡ ಮಹಿಳೆಯರು ಉದ್ಯಮರಂಗದಲ್ಲಿ ಅಭಿವೃದ್ಧಿ ಸಾಧಿಸಲು ಉತ್ತಮ ವೇದಿಕೆ. ಈ ಮಾರಾಟ ಮೇಳದಲ್ಲಿ ಸಾರ್ವಜನಿಕರು ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.