ಸಾರಾಂಶ
ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಅಪರಾಧವಾಗಿದ್ದು, ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು.
ಕನ್ನಡಪ್ರಭ ವಾರ್ತೆ ಗುರುಮಠಕಲ್
ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಯಾದಗಿರಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ ವತಿಯಿಂದ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಗುರುಗಳಾದ ಮಂಜುಳಾ ಜೆನ್ನೂರು ಉದ್ಘಾಟನೆ ಮಾಡಿದರು.ನಂತರ ಮಾತನಾಡಿದ ಅವರು, ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಅಪರಾಧವಾಗಿದ್ದು, ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು ಎಂದರು.
ನಿರಂತರವಾಗಿ ನಮ್ಮ ಶಾಲೆಯ ಮಕ್ಕಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯ ಬಗ್ಗೆ ಕಾನೂನು ಅರಿವು-ನೆರವು ಮತ್ತು ಜಾಗೃತಿ ಮೂಡಿಸುತ್ತಿರುವ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಸೊಸೈಟಿಯವರಿಗೆ ಧನ್ಯವಾದಗಳು ತಿಳಿಸಿದರು.ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವವರ ವಿರುದ್ಧ 6 ತಿಂಗಳಿಂದ 2 ವರ್ಷ ಶಿಕ್ಷೆ ಅಥವಾ 20,000 ರಿಂದ 50,000ಗಳವರೆಗೆ ದಂಡ ಅಥವಾ ಎರಡನ್ನು ಸಹ ದಾಖಲಿಸಲಾಗುವುದು ಎಂದು ತಿಳಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಪರಸಪ್ಪ ಸೈದಪ್ಪಗೋಳ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಮಿಕ ನಿರೀಕ್ಷಕರಾದ ಸಂಗೀತಾ ಹೊನ್ನೂರು, ಕಾರ್ಮಿಕ ಇಲಾಖೆಯ ಡಿ.ಇ.ಒ. ಅಂಬರೀಶ್ ಹಾಗೂ ಶಾಲಾ ಸಿಬ್ಬಂದಿಗಳು ಇದ್ದರು.