ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರಗೌಡ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರಗೌಡ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅವರಿಗೆ 88 ವರ್ಷವಾಗಿತ್ತು. ರಾಮಚಂದ್ರಗೌಡರು ಪತ್ನಿ ಯಶೋದಾ, ಪುತ್ರ ಹಾಗೂ ಬಿಜೆಪಿ ಮುಖಂಡ ಸಪ್ತಗಿರಿ ಗೌಡ, ಪುತ್ರಿ ಕವಿತಾ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.

ಕುಟುಂಬದ ಸದಸ್ಯರು ಬಸವೇಶ್ವರನಗರದ ಅವರ ನಿವಾಸದಲ್ಲಿ ಸಂಜೆ 4 ಗಂಟೆವರೆಗೂ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಸಚಿವರು, ಮಾಜಿ ಸಚಿವರು, ಮುಖಂಡರು ಸೇರಿದಂತೆ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ಸಂಜೆ 5.30ಕ್ಕೆ ಕಾಮಾಕ್ಷಿಪಾಳ್ಯದ ಪೇಟೆ ಚೆನ್ನಪ್ಪ ಎಸ್ಟೇಟ್‌ನಲ್ಲಿ ಒಕ್ಕಲಿಗ ಸಪ್ರದಾಯದಂತೆ ಸರ್ಕಾರಿ ಗೌರವದೊಂದಿಗೆ ರಾಮಚಂದ್ರಗೌಡರ ಮೃತದೇಹದ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ಖುದ್ದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರಿ ಗೌರವದ ಭಾಗವಾಗಿ ರಾಮಚಂದ್ರಗೌಡ ಅವರ ಪತ್ನಿ ಯಶೋದಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ರಾಮಚಂದ್ರಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಕಟ್ಟಾಳು:

ರಾಮಚಂದ್ರಗೌಡರು 1938ರ ಡಿ.13ರಂದು ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಜನಿಸಿದರು. ಎಂಜಿನಿಯರಿಂಗ್‌ ಪದವೀಧರರಾಗಿದ್ದ ಅವರು ಕಾಲಾಂತರದಲ್ಲಿ ಬೆಂಗಳೂರಿನಲ್ಲಿ ನೆಲೆನಿಂತರು. ರಾಮಚಂದ್ರಗೌಡ ಅವರು 1953ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ಸೇರ್ಪಡೆ ಮುಖಾಂತರ ಸಾರ್ವಜನಿಕ ಜೀವನಕ್ಕೆ ಕಾಲಿರಿಸಿದರು. 1975-77ರಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು.

ರಾಜ್ಯದಲ್ಲಿ ಭಾರತೀಯ ಜನಸಂಘದಿಂದ 1970ರಲ್ಲಿ ಅಂದಿನ ಬೆಂಗಳೂರು ನಗರ ಪಾಲಿಕೆ(ಬಿಸಿಸಿ) ಸದಸ್ಯರಾಗಿ ಚುನಾಯಿತರಾಗಿದ್ದರು. ಈ ಮೂಲಕ ಜನಸಂಘದಿಂದ ಪಾಲಿಕೆ ಪ್ರವೇಶಿಸಿದ ಮೊದಲ ಕಾರ್ಪೊರೇಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಬೆಂಗಳೂರು ಸಿಟಿ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಬೋರ್ಡ್‌(ಸಿಐಟಿಬಿ) ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದ ಪ್ರಮುಖ ನಾಯಕರಲ್ಲಿ ರಾಮಚಂದ್ರಗೌಡರು ಪ್ರಮುಖರಾಗಿದ್ದರು.

ರಾಮಚಂದ್ರಗೌಡ ಅವರು ಸತತ ಐದು ಅವಧಿಗೆ(1988-2018) ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸುದೀರ್ಘ ಕಾಲ ರಾಜ್ಯದಲ್ಲಿ ಪಕ್ಷ ಸಂಘಟಿಸಿದರು. ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ರಾಜ್ಯದಲ್ಲಿ ಪಕ್ಷ ಬೆಳೆಸಲು ಶ್ರಮಿಸಿದರು.

2006ರ ಜೆಡಿಎಸ್‌-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಣ್ಣ ಉಳಿತಾಯ, ರೇಷ್ಮೆ ಕೃಷಿ, ಗಣಿಗಾರಿಕೆ, ಭೂವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿದ್ದರು. ಇವರ ಅವಧಿಯಲ್ಲಿ ರಾಜ್ಯದಲ್ಲಿ ಲಾಟರಿ ನಿಷೇಧ ಜಾರಿಗೆ ಬಂದಿತು. ಬಳಿಕ 2008ರ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದರು. 2010ರಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದರು. ರಾಮಚಂದ್ರಗೌಡರು 2018ರ ಅವಧಿಯಲ್ಲಿ ಸಕ್ರಿಯ ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆದಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌, ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜ್‌ನಾಥ್‌ ಸಿಂಗ್‌, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌‍. ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.