ಸಾರಾಂಶ
ಕನ್ನಡಪ್ರಭ ವಾರ್ತೆ ಮಣಿಪಾಲ
ಜಿಲ್ಲಾಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.1ರಂದು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಅರೋಗ್ಯ ರಕ್ಷಣೆಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದರು.ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ.4ರಂದು ಹಿರಿಯ ನಾಗರಿಕರಿಗೆ ಕ್ರೀಡಾ ಸ್ಪರ್ಧೆಗಳು ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಾಯನ ಸ್ಪರ್ಧೆ ಹಾಗೂ ಏಕಪಾತ್ರಭಿನಯ ನಡೆಯಲಿವೆ.ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಪುರುಷ ಹಿರಿಯ ನಾಗರಿಕರಿಗೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದ ಅವರು, ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳಿಗೆ ಪ್ರಯಾಣದರ, ವಸತಿ, ಊಟ ಮತ್ತು ಉಪಾಹಾರದ ವ್ಯವಸ್ಥೆಯನ್ನು ಇಲಾಖೆಯ ವತಿಯಿಂದ ಕಲ್ಪಿಸಲಾಗುವುದು ಎಂದರು.
ಅಲ್ಲದೇ ಪ್ರೌಢಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ನಮ್ಮ ಹಿರಿಯರು ನಮ್ಮ ಆದರ್ಶ ಎಂಬ ಶೀರ್ಷಿಕೆಯಡಿ ಹಿರಿಯರ ಮೌಲ್ಯಗಳು, ತತ್ವ ಸಿದ್ಧಾಂತಗಳು, ಸತ್ಯ ನ್ಯಾಯ ನೀತಿ, ಸಂಸ್ಕಾರ, ಹಿರಿಯರನ್ನು ನಿರ್ಲಕ್ಷಿಸದೇ ವೃದ್ಧಾಶ್ರಮಗಳಿಗೆ ಕಳುಹಿಸದೇ ಅವರ ಲಾಲನೆ, ಪಾಲನೆ, ಸಂರಕ್ಷಣೆ ಕಾಯ್ದೆ ಕುರಿತು ವಾಕ್‌ಚಾತುರ್ಯ ಸ್ಪರ್ಧೆಗಳನ್ನು ನಡೆಸಲಾಗುತ್ತದೆ ಎಂದವರು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ವಾರ್ತಾಧಿಕಾರಿ ಮಂಜುನಾಥ್ ಬಿ., ಡಿಡಿಪಿಯು ಮಾರುತಿ, ಡಿಡಿಪಿಐ ಗಣಪತಿ ಹಾಗೂ ವಿವಿಧ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.