ಕನ್ನಡಪ್ರಭ ವಾರ್ತೆ ಕೊರಟಗೆರೆ
ಮಾಜಿ ಸಚಿವ, ಹಿರಿಯ ರಾಜಕಾರಣಿ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದ ಸಿ. ವೀರಣ್ಣ ಅವರು ಶುಕ್ರವಾರ ರಾತ್ರಿ ತುಮಕೂರು ಜಿಲ್ಲೆಯ ಕೊರಟಗೆರೆಯ ಬುಕ್ಕಾಪಟ್ಟಣ ಗ್ರಾಮದ ಸಮೀಪ ಇರುವ ತಮ್ಮ ತೋಟದ ಮನೆಯಲ್ಲಿ ನಿಧನರಾದರು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ತಿಂಗಳು ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವೀರಣ್ಣ ಅವರ ಆರೋಗ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಚಾರಿಸಿದ್ದರು. ಆದರೆ, ಚಿಕಿತ್ಸೆ ಬಳಿಕವೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಸಿ. ವೀರಣ್ಣ ಅವರು ರಾಜಕೀಯ ಪ್ರವೇಶಿಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ೧೯೮೩ರಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು, ೧೯೮೪ರಿಂದ ೧೯೮೯ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದಿವಂಗತ ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್. ಬೊಮ್ಮಾಯಿ ನೇತೃತ್ವದ ಸರ್ಕಾರಗಳಲ್ಲಿ ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಮತ್ತು ವಾಣಿಜ್ಯ, ಬಂಧಿಖಾನೆ ಸೇರಿದಂತೆ ೧೧ ಇಲಾಖೆಗಳ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ ಅವರು ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಪ್ರಕ್ರಿಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ನಾಯಕರಾಗಿ ಗುರುತಿಸಿಕೊಂಡಿದ್ದರು.ಬಳ್ಳಾರಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದ ವೀರಣ್ಣ ಅವರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯನ್ನು ಬಿಟ್ಟು ಅಗಲಿದ್ದಾರೆ. ಅವರ ನಿಧನಕ್ಕೆ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ನಿಧನದ ಸುದ್ದಿ ತಿಳಿದು ತೋಟದ ಮನೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಅಧಿಕಾರಿಗಳ ವರ್ಗ ಸಿ.ವೀರಣ್ಣ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಸಿ.ವೀರಣ್ಣ ಅವರು ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾದ ಮೇಲೆ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ವೀರಣ್ಣ ಅವರ ಪ್ರಾಮಾಣಿಕತೆಗೆ ಮೆಚ್ಚಿಕೊಂಡು ರಾಮಕೃಷ್ಣ ಹೆಗಡೆ ಅವರು ಸುಮಾರು ೭ ಖಾತೆಗಳನ್ನು ನೀಡಿದ್ದರು. ಎಲ್ಲಾ ಖಾತೆಗಳನ್ನೂ ಅತ್ಯಂತ ಪ್ರಮಾಣಿಕವಾಗಿ ನಿಭಾಯಿಸಿರುವುದನ್ನ ಚರಿತ್ರೆಯಲ್ಲಿ ನೋಡಬಹುದು. ಅವರ ಪ್ರಾಮಾಣಿಕತೆಗೆ ಪಕ್ಷತೀತವಾಗಿ ಅವರಿಗೆ ಬೆಂಬಲ ನೀಡಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ತಿಳಿಸಿದರು.