ಸಾರಾಂಶ
ಚಿತ್ರದುರ್ಗ: ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ಜಿಲ್ಲೆಯಲ್ಲಿ ಹಲವು ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಗಂಭೀರ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.ಮಕ್ಕಳ ರಕ್ಷಣೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ 189 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ 1098 ಹಾಗೂ 112 ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಪ್ರಚುರ ಪಡಿಸಲಾಗಿದೆ. ಜೊತೆಗೆ ಮಕ್ಕಳ ಗ್ರಾಮ ಸಭೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಕೃಷಿ ಹೊಂಡ, ಕಲ್ಲು ಕ್ವಾರಿ ಹಾಗೂ ಜಲಮೂಲಗಳ ಸುತ್ತ ಅಗತ್ಯ ಮುನ್ನಚ್ಚರಿಕೆ ಕ್ರಮಕೈಗೊಂಡು ಅವಘಡಗಳು ಸಂಭವಿಸದಂತೆ ಕ್ರಮಕೈಗೊಳ್ಳಲಾಗಿದೆ ಎಂದರು.
ಶಾಲೆಗಳ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು, ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳು ಅಳವಡಿಕೆಯಾಗಿರುವ ಬಗ್ಗೆ ಪರಿಶೀಲಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಲಾಗಿದೆ. ವಿದ್ಯುತ್ ಅವಘಡಗಳು ಸಂಭವಿಸದಂತೆ ಕ್ರಮವಹಿಸಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಎಲ್ಲಾ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳಿಗೂ ಸಹ ಜವಾಬ್ದಾರಿಗಳಿದ್ದು, ತಮ್ಮ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣೆಗೆ ತಕ್ಷಣ ಮುಂದಾಗಬೇಕು ಎಂದು ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಅನುಷ್ಠಾನಾಧಿಕಾರಿಗಳು ತಂದೆ-ತಾಯಿಗಿಂತಲೂ ಹೆಚ್ಚಿನದಾಗಿ ಮಕ್ಕಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮಕ್ಕಳ ರಕ್ಷಣೆ ಹಾಗೂ ಬೆಳವಣಿಗೆಗಾಗಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಕ್ಕಳ ರಕ್ಷಣಾ ನೀತಿ-2016ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.
ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಳ್ಳುವ ಘಟನೆಗಳು ಇತ್ತೀಚೆಗೆ ವರದಿಯಾಗುತ್ತಿವೆ. ಹಾಗಾಗಿ ಶೈಕ್ಷಣಿಕ ಅನುಷ್ಠಾನಾಧಿಕಾರಿಗಳು ಈ ಕುರಿತು ವಿಷಯಗಳನ್ನು ಸೂಕ್ಷ್ಮವಾಗಿ ತಿಳಿದುಕೊಂಡು, ಎಚ್ಚರವಹಿಸಬೇಕು. ಅಲ್ಲದೇ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಮಾತನಾಡಿ, ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆಗದ ರೀತಿಯಲ್ಲಿ ಅವರನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಪೊಲೀಸ್ ಹಾಗೂ ಇನ್ನಿತರ ಎಲ್ಲಾ ತುರ್ತು ಸೇವೆಗಳಿಗಾಗಿ 112 ಗೆ ಉಚಿತ ಕರೆ ಮಾಡಬಹುದು. ಚಿತ್ರದುರ್ಗ ಜಿಲ್ಲೆಯ 112 ತುರ್ತು ಸೇವೆಯು ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಯಾವುದೇ ಒಂದು ಘಟನೆಯಾದರೆ ಈ ಮೊದಲೇ 39 ನಿಮಿಷದಲ್ಲಿ ತಲುಪಲಾಗುತ್ತಿತ್ತು. ಈಗ 24 ನಿಮಿಷದೊಳಗೆ ತಲುಪಿ ಪೊಲೀಸರು ಸಮಸ್ಯೆಗೆ ಸ್ಪಂದಿಸಲಿದ್ದಾರೆ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಶಾಲೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲೂ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಇದರ ಪರಿಣಾಮಕಾರಿ ಅನುಷ್ಠಾನವಾಗಬೇಕು. ಹಾಗಾಗಿ ಇದರ ಕುರಿತು ಮಾಹಿತಿ ನೀಡಲು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು. ಚಿತ್ರದುರ್ಗ ಜಿಲ್ಲೆಯನ್ನು ಮಕ್ಕಳಿಗೆ ರಕ್ಷಣೆ ಇರುವ, ಸುರಕ್ಷತಾ ವಾತಾವರಣ ಇರುವ ಜಿಲ್ಲೆಯನ್ನಾಗಿ ಮಾರ್ಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು ಕೊಪ್ಪಳ ಜಿಲ್ಲೆಯ ಯೂನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್ಟ ವಿಶೇಷ ಉಪನ್ಯಾಸ ನೀಡಿದರು.
ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ.ಕೆ ಶೀಲಾ, ಜಿ.ಟಿ.ಬಸವರಾಜ್, ಬಾಲನ್ಯಾಯ ಮಂಡಳಿ ಸದಸ್ಯರಾದ ಸುಮನ ಎಸ್ ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಸೇರಿದಂತೆ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿ ಹಾಗೂ ಮುಖ್ಯ ಶಿಕ್ಷಕರು, ವಸತಿ ಶಾಲೆಗಳ ಪ್ರಾಂಶುಪಾಲರು, ನಿಲಯ ಪಾಲಕರು ಇದ್ದರು.ಮಕ್ಕಳು ಬೆಳೆಯಬಹುದಾದಂತಹ, ಉತ್ತಮವಾಗಿ ಪ್ರತಿಭೆ ಅರಳಬಹುದಾದಂತಹ ಒಳ್ಳೆ ಪ್ರಜೆಯಾಗಿಸುವಂತಹ ವಾತಾವರಣವನ್ನು ಸೃಷ್ಟಿಸಿ