ದೇಶದ ಗ್ರಾಮೀಣ ಭಾಗದಲ್ಲಿ ರೋಗಿಗಳು, ಗರ್ಭಿಣಿಯರ, ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ಕಾರ್ಯ ಮಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಶಿರಾ ದೇಶದ ಗ್ರಾಮೀಣ ಭಾಗದಲ್ಲಿ ರೋಗಿಗಳು, ಗರ್ಭಿಣಿಯರ, ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರೇ ವೈದ್ಯರ ರೀತಿಯಲ್ಲಿ ಸೇವೆ ಮಾಡುತ್ತಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು. ಅವರು ನಗರದ ನಂದಿನಿ ಕ್ಷೀರ ಭವನದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ ಆಶಾ ಕಾರ್ಯಕರ್ತೆಯರು ಹಾಗೂ ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಸಿಆರ್‌ಪಿ ತರಬೇತಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಆರೋಗ್ಯ ಕೇಂದ್ರದ ರೀತಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಮಾಡಿರುವ ಸೇವೆ ಮರೆಯಲು ಸಾಧ್ಯವಿಲ್ಲ. ಇಡೀ ದೇಶದಲ್ಲಿ ಕೋವಿಡ್ ಕಡಿಮೆಯಾಗಲು ಕಾರಣರಾಗಿದ್ದಾರೆ. ತಮ್ಮ ಕುಟುಂಬವನ್ನು ಲೆಕ್ಕಿಸದೆ ಸಾರ್ವಜನಿಕರ ಆರೋಗ್ಯ ಕಾಪಾಡಿದ್ದಾರೆ. ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನ ಸಂಸ್ಥೆ ನಿರ್ದೇಶಕ ಮಲ್ಲಣ್ಣಗೌಡ ಪಾಟೀಲ್ ಮಾತನಾಡಿ ಪ್ರತಿ ವರ್ಷ ಪ್ರಾಥಮಿಕ ಚಿಕಿತ್ಸೆ ದೊರಕದೆ ಸುಮಾರು ೨ ಲಕ್ಷ ಮಂದಿ ಅಪಘಾತದಲ್ಲಿ ಸಾವನ್ನಪುತ್ತಿದ್ದಾರೆ. ಆದ್ದರಿಂದ ತುರ್ತು ಸಂದರ್ಭದಲ್ಲಿ ಚಿಕತ್ಸೆ ನೀಡಿದರೆ ಶೇ. ೪೦ ರಷ್ಟು ಸಾವು ಸಂಭವಿಸುವುದನ್ನು ತಡೆಗಟ್ಟಬಹುದು ಎಂದರು.
ತುಮಕೂರು ಹಾಲು ಒಕ್ಕೂಟದ ಶಿರಾ ವ್ಯವಸ್ಥಾಪಕ ಗಿರೀಶ್ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಸಂಸ್ಥೆಯ ಡಾ.ಪ್ರದೀಪ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಎಂ.ಗೌಡ, ಸಾರ್ವಜನಿಕ ಆಸ್ಪತ್ರೆಯ ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ರಾಮ್ ನಾಯಕ್, ಡಾ.ದೀಪಕ್, ಡಾ.ಯೋಗೀಶ್, ಡಾ.ಹೇಮ, ನರಸಪ್ಪ ಸೇರಿದಂತೆ ಹಲವರು ಹಾಜರಿದ್ದರು.