ಸಾರಾಂಶ
ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಅಧಿವೇಶನದ ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.
ಬೆಳಗಾವಿ : ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಅಧಿವೇಶನದ ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಸಮಯ ಮೀಸಲು ಇಡಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.
ಸುವರ್ಣವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಸಿದ್ಧತೆಗಾಗಿ ಅಧಿಕಾರಿಗಳ ಸಭೆ ನಡೆಸಿ ಸಲಹೆ-ಸೂಚನೆ ನೀಡಲಾಗಿದೆ. ಕಳೆದ ವರ್ಷ ಅತ್ಯುತ್ತಮ ರೀತಿಯಲ್ಲಿ ಅಧಿವೇಶನ ನಡೆದಿದೆ. ಈ ಬಾರಿ ಇನ್ನಷ್ಟು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಅಧಿವೇಶನದ 100ನೇ ವರ್ಷಾಚರಣೆ ಕುರಿತು ಸರ್ಕಾರ ನಿರ್ಧರಿಸಲಿದೆ. ಈ ಬಾರಿ ವಿಧಾನಮಂಡಲ ಕಲಾಪದಲ್ಲಿ ಸಕಾರಾತ್ಮಕ ಚರ್ಚೆಗಳು ನಡೆಯಲಿವೆ. ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಾಗೂ ಕಿತ್ತೂರು ಚನ್ನಮ್ಮ ವಿಜಯೋತ್ಸವದ 200ನೇ ವರ್ಷಾಚರಣೆ ಕುರಿತು ಅಧಿವೇಶನ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಹೇಳಿದರು.
ಅಧಿವೇಶನದ ಸಂದರ್ಭದಲ್ಲಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ಪ್ರತಿಭಟನೆಗಳಿಗೆ ಅವಕಾಶ ನೀಡಲಾಗುವುದು. ಪ್ರಮುಖ ಸಮಸ್ಯೆಗಳ ಕುರಿತು ಆಯಾ ಇಲಾಖೆಯ ಸಚಿವರ ಮಟ್ಟದಲ್ಲಿ ಚರ್ಚೆ ನಡೆಸಲು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಡಿಸೆಂಬರ್ 9 ರಿಂದ 20ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ಸಾಧ್ಯತೆಯಿದೆ. ಆದರೆ ಇನ್ನೂ ದಿನಾಂಕ ಅಂತಿಮಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಆರಂಭಿಸಲಾಗಿದೆ. ಕಾಂಗ್ರೆಸ್ ಅಧಿವೇಶನ ಮತ್ತಿತರ ಕಾರ್ಯಕ್ರಮಗಳ ರೂಪುರೇಷೆ ತಯಾರಿಸಲಾಗುವುದು ಎಂದರು.
ಅಧಿವೇಶನದಲ್ಲಿ ಶಾಸಕರ ಸಹಭಾಗಿತ್ವ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಶಾಸಕರ ಭವನ ನಿರ್ಮಾಣಕ್ಕೆ ಸೂಕ್ತ ಪ್ರಸ್ತಾವ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು. ಶಾಸಕರ ಭವನ ಸೇರಿದಂತೆ ಶಾಶ್ವತ ಮೂಲಸೌಕರ್ಯ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಆಸಿಫ್(ರಾಜು) ಸೇಠ್, ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಪಿ ರೋಹನ್ ಜಗದೀಶ ಮತ್ತಿರರು ಇದ್ದರು.