ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ರಾಜಿಯಾಗಬಹುದಾದ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು.

ಸಿಜೆಎಂ ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಸಲಹೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜಿಯಾಗಬಲ್ಲ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಂಡು ಸಮಯ ಹಾಗೂ ಹಣವನ್ನು ಉಳಿತಾಯ ಮಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ. ರಾಮಲಿಂಗೇಗೌಡ ಸಾರ್ವಜನಿಕರಿಗೆ ಕರೆ ನೀಡಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಬೆಂಗಳೂರು ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ನಗರದ ಸಿಜೆಎಂ ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, 2026ನೇ ಸಾಲಿನ ಮೂರನೇ ಬೃಹತ್ ಲೋಕ ಅದಾಲತ್ ಅನ್ನು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇಂದು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ರಾಜಿಯಾಗಬಹುದಾದ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.

ಲೋಕ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಚೆಕ್ ಅಮಾನ್ಯ, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಮತ್ತು ಕುಟುಂಬ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕಾರ್ಮಿಕರ ವಿವಾದಗಳು, ಭೂಸ್ವಾಧೀನ, ಸೇವಾ ಪ್ರಕರಣಗಳು, ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶವಿದೆ. ನ್ಯಾಯಾಲಯದಲ್ಲಿ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಲೋಕ ಅದಾಲತ್ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಉಭಯ ಕಕ್ಷಿದಾರರ ಒಪ್ಪಿಗೆಯೊಂದಿಗೆ ಪ್ರಕರಣಗಳು ಇತ್ಯರ್ಥವಾಗುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ, ಕಕ್ಷಿದಾರರ ನಡುವಿನ ವೈಮನಸ್ಸು ಕಡಿಮೆಯಾಗಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗುತ್ತದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮಾತನಾಡಿ, ನ್ಯಾಯಾಂಗ ವ್ಯವಸ್ಥೆಯು ನ್ಯಾಯದಾನಕ್ಕೆ ಸೀಮಿತವಾಗದೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಸಿ ನೆಡುವುದು, ಹಿಂದುಳಿದ ಗ್ರಾಮಗಳ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಕಾನೂನು ಅರಿವು ಮತ್ತು ನೆರವು ನೀಡುವುದು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರುಗಳು , ವಕೀಲರು ಹಾಗೂ ಕಕ್ಷಿದಾರರು ಇದ್ದರು.

ಸಿಕೆಬಿ-4 ನಗರದ ಸಿಜೆಎಂ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನ್ಯಾ.ಟಿ.ಪಿ.ರಾಮಲಿಂಗೇಗೌಡ ಚಾಲನೆ ನೀಡಿದರು