ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಕೃಷಿ ವೆಚ್ಚ ಹೆಚ್ಚುತ್ತಿರುವುದರಿಂದ ಕಬ್ಬಿನ ಬೆಲೆಯೂ ಏರಿಕೆಯಾಗಬೇಕು.

ಹುಬ್ಬಳ್ಳಿ:

ರಾಜ್ಯ ಕಾಂಗ್ರೆಸ್ಸಿನ ಏಳೆಂಟು ಶಾಸಕರು ನನ್ನ ಸಂಪರ್ಕದಲ್ಲಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ 25ಕ್ಕೂ ಹೆಚ್ಚು ಶಾಸಕರಿದ್ದಾರೆ. ಪದವೀಧರ ಮತಕ್ಷೇತ್ರದ ಚುನಾವಣೆ ಬಳಿಕ ರಾಜಕೀಯ ಬೆಳವಣಿಗೆಗಳು ಮತ್ತಷ್ಟು ಸ್ಪಷ್ಟವಾಗಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಕನಿಷ್ಠ 7ರಿಂದ 8 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೂತ್ರ ಅಗತ್ಯ:

ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಕೃಷಿ ವೆಚ್ಚ ಹೆಚ್ಚುತ್ತಿರುವುದರಿಂದ ಕಬ್ಬಿನ ಬೆಲೆಯೂ ಏರಿಕೆಯಾಗಬೇಕು. ಆದರೆ, ರೈತರು, ಗ್ರಾಹಕರು, ಸಕ್ಕರೆ ಕಾರ್ಖಾನೆಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ಸೂತ್ರ ರೂಪಿಸಬೇಕು ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಈ ಕುರಿತು ತಜ್ಞರ ಸಮಿತಿ ರಚಿಸಿದ್ದು, ಸಮಿತಿ 30 ದಿನಗಳಲ್ಲಿ ವರದಿ ಸಲ್ಲಿಸಬೇಕಿದೆ. ಕಬ್ಬಿನ ಬೆಲೆ ಹೆಚ್ಚಳದ ಲಾಭದ ಶೇ.70ರಷ್ಟನ್ನು ರೈತರಿಗೆ ನೀಡುವ ನಿಯಮವಿದೆ. ಹೀಗಾಗಿ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳವಾದರೆ ರೈತರಿಗೂ ಅನುಕೂಲವಾಗಲಿದೆ ಎಂದರು.

ಗೃಹ ಬಳಕೆಯ ಸಕ್ಕರೆ ಹಾಗೂ ವಾಣಿಜ್ಯ ಉತ್ಪನ್ನಗಳ ತಯಾರಿಕೆಗೆ ಬಳಸುವ ಸಕ್ಕರೆಗೆ ಪ್ರತ್ಯೇಕ ದರ ನಿಗದಿಪಡಿಸಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ. ಇದರಿಂದ ಸಾಮಾನ್ಯ ಗ್ರಾಹಕರಿಗೆ ಹೆಚ್ಚಿನ ಹೊರೆ ಹೊರಿಸದೆ ರೈತರಿಗೆ ಲಾಭ ಕಲ್ಪಿಸಬಹುದು. ಕಬ್ಬಿನ ಬೆಲೆ ಟನ್‌ಗೆ ₹5,500 ನಿಗದಿಪಡಿಸುವ ಬೇಡಿಕೆ ಸೇರಿದಂತೆ ಎಲ್ಲ ಅಂಶಗಳನ್ನು ಸಮಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ನಿರಾಣಿ ತಿಳಿಸಿದರು.

ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ ಖರೀದಿಸುವ ಭರವಸೆಯನ್ನು ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಲಾಗಿತ್ತು. ಆದರೆ, ಈ ವರೆಗೂ ಈಡೇರಿಲ್ಲ. ವಾಣಿಜ್ಯ ಬಳಕೆಯ ಸಕ್ಕರೆ ಬೆಲೆ ಹೆಚ್ಚಳದ ಜತೆಗೆ ಎಥನಾಲ್ ಖರೀದಿಯಲ್ಲಿ ಉತ್ತರ ಮತ್ತು ದಕ್ಷಿಣ ಭಾರತಕ್ಕೆ ಆಗುತ್ತಿರುವ ತಾರತಮ್ಯ ನಿವಾರಣೆಯಾಗಬೇಕು ಎಂದು ಒತ್ತಾಯಿಸಿದರು.

ತನಿಖೆಯಾಗಲಿ:

ಸ್ಟಿಂಗ್ ಆಪರೇಷನ್‌ಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿರಾಣಿ, ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್‌ನವರು ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ಸಿಬಿಐ ತನಿಖೆಯಾಗಬೇಕು. ಯಾವುದೇ ಪಕ್ಷದವರಾಗಿದ್ದರೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದರು.

ಯತ್ನಾಳ ಬಂದರೆ ಸ್ವಾಗತ:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ-ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಭೇಟಿ ಕುರಿತು ಮಾತನಾಡಿದ ನಿರಾಣಿ, ಬಿಜೆಪಿಯಿಂದ ದೂರವಾಗಿರುವ ಅಸಮಾಧಾನಿತ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಯತ್ನಾಳ ಸೇರಿದಂತೆ ಪಕ್ಷದ ಬಗ್ಗೆ ಅಸಮಾಧಾನ ಹೊಂದಿರುವವರು ಮರಳಿ ಬರಬೇಕು ಎಂಬುದು ನಮ್ಮ ಒತ್ತಾಯ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ. ಅವರು ಮರಳಿ ಬಂದರೆ ಸ್ವಾಗತಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ವಿಪ ಸದಸ್ಯ ಲಿಂಗರಾಜ ಪಾಟೀಲ, ಚುನಾವಣಾ ಉಸ್ತುವಾರಿ ಚಂದ್ರಶೇಖರ ಪಾಟೀಲ, ರಾಜು ಕೋರ್ಯಾಣಮಠ ಇದ್ದರು.