ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜತೆಗೆ ಸೌಲಭ್ಯಗಳಿಂದ ವಂಚಿತರಾಗಿರುವವರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಮಹತ್ವದ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಹಿರೇಕೆರೂರು: ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜತೆಗೆ ಸೌಲಭ್ಯಗಳಿಂದ ವಂಚಿತರಾಗಿರುವವರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಮಹತ್ವದ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಪಟ್ಟಣದ ಕಾರ್ಮಿಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರೇಕೆರೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ತಾಲೂಕಿನ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ನೀಡಲು ಸೂಚಿಸಲಾಗಿದೆ. ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಲಾಗುವುದು. ಜಿಲ್ಲಾಡಳಿತದ ವ್ಯಾಪ್ತಿಗೆ ಬರುವ ವಿಷಯಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ರಾಜ್ಯ ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಬರ ಘೋಷಣೆ ಕುರಿತು ಪರಿಶೀಲನೆ: ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರೈತ ಸಂಘಟನೆಗಳ ಮುಖಂಡರು ಬರ ಘೋಷಣೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ. ಈಗಾಗಲೇ ಏಳು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಇನ್ನೊಂದು ತಾಲೂಕಿನ ಕುರಿತು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.ಸೆ. 21, 22 ಮತ್ತು 23ರಂದು ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಿ, ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಅರ್ಜಿಗಳಿಗೆ ತ್ವರಿತ ಸ್ಪಂದನೆಗೆ ಸೂಚನೆ: ಕಾರ್ಯಕ್ರಮಕ್ಕೆ ಆಗಮಿಸಿರುವ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳಿಗೆ ಸಾಧ್ಯವಾದಷ್ಟು ಶೀಘ್ರವಾಗಿ ಸ್ಪಂದಿಸಬೇಕು. ತಮ್ಮ ಹಂತದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ಇಂದೇ ಉತ್ತರ ನೀಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಹಾರಕ್ಕೆ ತಾಲೂಕು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು ಎಂದರು.ಜಿಲ್ಲಾಧಿಕಾರಿಗಳು, ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಮುಂದಿನ ಕೆಡಿಪಿ ಸಭೆಯಲ್ಲಿಯೂ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಶಾಸಕ ಯು.ಬಿ.ಬಣಕಾರ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿ ಪ್ರಜಾಸೇವಾ ಆಂದೋಲನವನ್ನು ರಾಜ್ಯಾದ್ಯಂತ ಹಂತ ಹಂತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಎರಡು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.ಈ ಹಿಂದೆ ಜನಸ್ಪಂದನ ಸೇರಿದಂತೆ ವಿವಿಧ ಹೆಸರಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮಗಳು ನಡೆದಿದ್ದರೂ, ಅವುಗಳ ಮನವಿಗಳು ವ್ಯವಸ್ಥಿತವಾಗಿ ದಾಖಲಾಗದೆ ಉಳಿಯುತ್ತಿದ್ದವು. ಆದರೆ ಪ್ರಜಾಸೇವಾ ಆಂದೋಲನವನ್ನು ವ್ಯವಸ್ಥಿತವಾಗಿ ದಾಖಲಿಸಿ, ಜನರ ಸಮಸ್ಯೆಗಳನ್ನು ಬೆಂಗಳೂರಿನವರೆಗೆ ತಲುಪಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿದೆ ಎಂದರು.
ರಾಜ್ಯದಲ್ಲಿ ಮೊದಲ ಬಾರಿಗೆ ಜನರ ಸೇವೆಗಾಗಿ ಪ್ರತ್ಯೇಕ ಪ್ರಜಾಸೇವಾ ಇಲಾಖೆಯನ್ನು ಆರಂಭಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ರಾಜ್ಯದ ಮೂಲೆಮೂಲೆಗಳಿಂದ ಬರುವ ಜನರ ಅಹವಾಲುಗಳನ್ನು ದಾಖಲಿಸಿಕೊಂಡು, ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಕಾರ್ಯವನ್ನು ಈ ಇಲಾಖೆಯ ಮೂಲಕ ಕೈಗೊಳ್ಳಲಾಗುತ್ತಿದೆ ಎಂದರು.ಯುವಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಜೋಡೋ ಯುವಕ ಸಂಘಗಳ ರಚನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ 100 ಸದಸ್ಯರನ್ನು ಹೊಂದಿರುವ ಯುವಕ ಸಂಘಗಳನ್ನು ರಚಿಸಿ, ರಾಜ್ಯದಾದ್ಯಂತ ಯುವಜನರನ್ನು ಸಂಘಟಿಸಿ ಸಮಾಜ ನಿರ್ಮಾಣ ಹಾಗೂ ಬಲವರ್ಧನೆಯಲ್ಲಿ ಅವರ ಪಾತ್ರವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಸಾರ್ವಜನಿಕರ ಗಮನ ಸೆಳೆದ ವಸ್ತು ಪ್ರದರ್ಶನ ಹಾಗೂ ಮಾಹಿತಿ ಮಳಿಗೆ: ಪ್ರಜಾಸೇವಾ ಆಂದೋಲನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಾವಯವ ಹಣ್ಣುಗಳ ಪ್ರದರ್ಶನ, ಪಟ್ಟಣ ಪಂಚಾಯಿತಿಯಿಂದ ಎರೆಹುಳು ಗೊಬ್ಬರದ ಮಾದರಿ, ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಬಂಜಾರ ಕೈಕಸೂತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಿ.ಪಿ.ಆರ್. ನಿಯಂತ್ರಣ ಲಸಿಕೆ ಮಾದರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಕಾರ್ಯಕ್ರಮಗಳ ವಸ್ತು ಪ್ರದರ್ಶನ, ಕಾರ್ಡ್ ಮೇಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ಉನ್ನತ ವ್ಯಾಸಂಗ ಮತ್ತು ಅಂತರಜಾತಿ ವಿವಾಹ ಪ್ರೋತ್ಸಾಹಧನ ಸೆಲ್ಫಿ ಪಾಯಿಂಟ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಸಿಇಒ ದಲ್ಜಿತ್ ಕುಮಾರ್, ಎಸ್ಪಿ ಯಶೋದಾ ವಂಟಗೋಡಿ, ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಸೀಲ್ದಾರ್ ಎಂ. ರೇಣುಕಾ, ತಹಸೀಲ್ದಾರ್- ಎಸ್.ಆರ್. ಸಿದ್ಧನಗೌಡ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಬುರಡೀಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಜಿಲ್ಲಾ ಉಪಾಧ್ಯಕ್ಷ ರಮೇಶ ಮಡಿವಾಳರ, ಸಂಜೀವಕುಮಾರ ನೀರಲಗಿ, ಎಂ.ಎಂ. ಮೈದೂರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.