ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪೈಕಿ ಅತಿ ಹೆಚ್ಚು ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ನಗರದ ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮೋತ್ಸವ ಆಚರಿಸಲಾಯಿತು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಬಸ್ಸಿಗೆ ಪೂಜೆ ನೆರವೇರಿಸಿ ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿಯಿಂದ ಮಹಿಳಾ ಪ್ರಯಾಣಿಕರು ಸಂತಸಗೊಂಡಿದ್ದು, ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಅವರು ತಿಳಿಸಿದರು.ಸ್ತ್ರೀ-ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ 2023ರ ಜೂನ್ 11 ರಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಅತ್ಯಂತ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುವ ಸಂಖ್ಯೆ ಕೂಡ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಬಸ್ಸುಗಳ ಸಂಖ್ಯೆಯನ್ನೂ ಸಹ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ ಎಂದ ಅವರು, ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಪ್ರಾರಂಭದಿಂದ ಈವರೆಗೆ 1512.61 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 461 ಕೋಟಿ ರು.ಗಳ ಆದಾಯವನ್ನು ತಂದಿದ್ದಾರೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ಸೇರಿದಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಚಂದ್ರಶೇಖರ್, ವಿಭಾಗೀಯ ಸಂಚಲನಾಧಿಕಾರಿ ಬಿ. ಮಂಜುನಾಥ್ ಸೇರಿದಂತೆ ಅಧಿಕಾರಿ,ಸಿಬ್ಬಂದಿ ಹಾಜರಿದ್ದರು. ಕಾರ್ಯಕ್ರಮದ ನಂತರ ಸಚಿವ ಡಾ.ಜಿ.ಪರಮೇಶ್ವರ ಅವರು ಡಿ. ದೇವರಾಜು ಅರಸು ಬಸ್ ನಿಲ್ದಾಣದಲ್ಲಿರುವ ಮೊದಲ ಮಹಡಿಯಲ್ಲಿರುವ ಮನ್ವಿ ಮಾಂಸಹಾರಿ ಹೋಟೆಲ್ ಹಾಗೂ ಅನ್ನಪೂರ್ಣೇಶ್ವರಿ, ಹೋಟೆಲ್‌ಗೆ ಭೇಟಿ ನೀಡಿ, ಅಡುಗೆ ಮನೆ ಶುಚಿತ್ವವನ್ನು ಪರಿಶೀಲಿಸಿ ಚಹಾ ಸೇವಿಸಿದರು.