ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರು 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಇದು, ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ದಾಖಲಾಗಿದೆ.ಈ ಬಗ್ಗೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇದು ಅತೀವ ಹೆಮ್ಮೆ ಮತ್ತು ಸಂತಸದ ವಿಚಾರ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ದಿಟ್ಟ ಯೋಜನೆಯಾದ ‘ಶಕ್ತಿ’ ಯೋಜನೆಯು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ನಲ್ಲಿ ದಾಖಲಾಗಿದೆ. 2023 ಜೂ.11ರಿಂದ 2025 ಜು.25ರವರೆಗೂ ಮಹಿಳೆಯರು 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಬೆಳೆಸಿದ್ದು, ಇದು ದಾಖಲೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಬಿಹೈಂಡ್ ಫ್ರೀ ರೈಡ್ಸ್’ ಹೆಸರಿನಲ್ಲಿ ‘ಸಸ್ಟೈನೆಬಲ್ ಮೊಬಿಲಿಟಿ ನೆಟ್ವರ್ಕ್’ನವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ.21 ರಷ್ಟು ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಇದರಿಂದ ರಾಜ್ಯದ ತಲಾ ಆದಾಯವೂ ಹೆಚ್ಚಳವಾಗಲು ಕಾರಣವಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.ಹೊಸ ಇತಿಹಾಸ: ಸಿಎಂ ಹರ್ಷ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಗೆ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈ ಬಗ್ಗೆ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಷಯ ಹಂಚಿಕೊಂಡಿರುವ ಅವರು, ಇಡೀ ನಾಡು ಹೆಮ್ಮೆಪಡುವ ಕ್ಷಣವಿದು. ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ 2023ರ ಜೂ.11 ರಿಂದ 2025ರ ಜು.25ರವರೆಗೆ 504.90 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತಿಳಿಸಿದ್ದಾರೆ.ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ-ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂ.1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.