ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಭೇಟಿ ನೀಡಿದರು. ಡಾ.ಶಾಲಿನಿ ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ. ಜಾಲಿ ಅವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪ್ರಭಾಕರ ಕೋರೆ ಅವರು, ಉತ್ತರ ಕರ್ನಾಟಕದಲ್ಲಿ ಕ್ಯಾನ್ಸರ್ ರೋಗಿಗಳ ಚಿಕಿತ್ಸೆ ಹಾಗೂ ಆರೈಕೆಗೆ ಅತ್ಯಾಧುನಿಕ ಸೌಲಭ್ಯಗಳ ಅಗತ್ಯ ಬಹಳವಿತ್ತು. ಅನೇಕರು ಚಿಕಿತ್ಸೆಯಿಂದ ವಂಚಿತರಾಗುತ್ತಿರ್ವುವದನ್ನು ಕಂಡು ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡಲಾಯಿತು. ಕೈಗೆಟಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡಿ ಸಮಾಜದ ಆರೋಗ್ಯ ರಕ್ಷಣೆಗೆ ಸದಾ ಬದ್ಧವಾಗಿದ್ದೇವೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೇಡಿಯೊ ಆಂಕೊಲಾಜಿ ಚಿಕಿತ್ಸಾ ಕೇಂದ್ರ ಮತ್ತು ಅಸ್ಥಿಮಜ್ಜೆ (ಬೋನ್ ಮ್ಯಾರೋ)ಯ ಕಸಿ, ನಿಖರವಾದ ಮತ್ತು ಜೀನೋಮಿಕ್ ಔಷಧ ಆಧಾರಿತ ಕ್ಯಾನ್ಸರ್ ಆರೈಕೆ ಸೇರಿದಂತೆ ವಿವಿಧ ವಿಭಾಗಗಳನ್ನು ತೋರಿಸಿದರು. ಡಿ.30ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜನಸೇವೆಗೆ ಅರ್ಪಿಸಲಿದ್ದಾರೆ ಎಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ಸರ್ಕಾರದ ಸಹಯೋಗದೊಂದಿಗೆ ಕ್ಯಾನ್ಸರ್ ಚಿಕಿತ್ಸೆ ಹಾಗೂ ಆರೈಕೆಯನ್ನು ಮತ್ತಷ್ಟು ಹೆಚ್ಚಿಸಲಾಗುತ್ತದೆ. ರಾಜ್ಯಾದ್ಯಂತ ಕ್ಯಾನ್ಸರ್ ಚಿಕಿತ್ಸಾ ವ್ಯವಸ್ಥೆಯನ್ನು ಬಲಗೊಳಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಕ್ಯಾನ್ಸರ್ ಆಸ್ಪತ್ರೆ ವೀಕ್ಷಿಸಿ ನಂತರ ಮಾತನಾಡಿದ ಡಾ.ಶಾಲಿನಿ ರಜನೀಶ್ ಅವರು ಕರ್ನಾಟಕದಾದ್ಯಂತ ಕ್ಯಾನ್ಸರ್ ಆರೈಕೆ ಸೌಲಭ್ಯಗಳನ್ನು ಮೇಲ್ದರ್ಜೆಗೇರಿ, ವಿಶ್ವಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಬೆಳಗಾವಿಯನ್ನು ಹೆಲ್ತಕೇರ್ ಹಬ್ ಆಗಿ ಪರಿವರ್ತಿಸುವಲ್ಲಿ ಡಾ. ಪ್ರಭಾಕರ ಕೋರೆ ಅವರ ಕಾರ್ಯವನ್ನು ಶ್ಲಾಘಿಸಿದರು.