ಸಾರಾಂಶ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಶನಿವಾರಸಂತೆ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯ ನುರಿತ ತಜ್ಞ ವೈದ್ಯರ ತಂಡ ಪ್ರತಿಯೊಂದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳುತ್ತಿದೆ. ಜನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶೋಕ್ ಮನವಿ ಮಾಡಿದ್ದಾರೆ.ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಸ್ಥಳೀಯ ಆಸ್ಪತ್ರೆಗಳಲ್ಲಿ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿ ತಜ್ಞ ವೈದ್ಯರ ಸೇವೆ ಇಲ್ಲದಿರುವುದ್ದರಿಂದ ಆರೋಗ್ಯ ಇಲಾಖೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಉಪಯೋಗವಾಗುವ ಸಲುವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತದೆ ಈ ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರ ತಂಡ ಭಾಗವಹಿಸಿ ನಾನಾ ಕಾಯಿಲೆಗೆ ಸಂಬಂಧಿಸಿದ ರೋಗಿಗಳನ್ನು ತಪಾಸಣೆ ಮಾಡುತ್ತದೆ ಎಂದರು.ಶಿಬಿರ ಉದ್ಘಾಟಿಸಿದ ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ, ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣ ಜನರು ದೂರದ ಆಸ್ಪತ್ರೆಗಳಿಗೆ ಹೋಗಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೊಡಗು ಮೆಡಿಕಲ್ ಕಾಲೇಜಿನ ನುರಿತ ತಜ್ಞರು ಸ್ಥಳೀಯ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಪತ್ರಕರ್ತೆ ಶ.ಗ.ನಯನತಾರ ಪ್ರಕಾಶ್ಚಂದ್ರ, ಶಿಬಿರದ ನೋಡಲ್ ಅಧಿಕಾರಿ ಡಾ.ಮಹೇಶ್, ಆಯುಷ್ಮಾನ್ ಆಸ್ಪತ್ರೆ ವೈದ್ಯಾಧಿಕರಿ ಡಾ.ಕರುಣಾಕರ್, ಡಾ.ಬಿಪಿನ್, ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳ, ಹಿರಿಯ ಆರೋಗ್ಯ ಅಧಿಕಾರಿ ಸರಸ್ವತಿ ಮತ್ತಿತರರಿದ್ದರು.ಮಡಿಕೇರಿ ಮೆಡಿಕಲ್ ಕಾಲೇಜಿನ ಸರ್ಜನ್ ಡಾ.ನಂಜುಂಡಯ್ಯ, ಮೂಳೆ ತಜ್ಞ ಡಾ.ವಿನಯ್ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ತಪಾಸಣೆ ನಡೆಸಿತು.